ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್(ರಿ.) ಹಾಗೂ ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮಗಳ ಮೂಲಕ ವಿದ್ಯಾರ್ಥಿಗಳಲ್ಲಿ ಮಾದಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಿ ಆರೋಗ್ಯವಂತ ಜೀವನ ರೂಪಿಸಿಕೊಳ್ಳಲು ನಾಂದಿ ಹಾಡಿದೆ. ವಿದ್ಯಾರ್ಥಿಗಳು ಪಡೆದ ಮಾಹಿತಿಯನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಸ್ವಸ್ಥ ಸಮಾಜ ನಿರ್ಮಾಣದ ರೂವಾರಿಗಳಾಗಬೇಕು ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್(ರಿ.) ಇದರ ಉಡುಪಿ ಜಿಲ್ಲಾ ನಿರ್ದೇಶಕ ಶಿವರಾಯ ಪ್ರಭು ಕರೆ ನೀಡಿದರು.
ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್(ರಿ.) ಮತ್ತು ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ ಉಡುಪಿ ತಾಲೂಕು ಹಾಗೂ ಅಂಬಲಪಾಡಿ ವಲಯ ಇದರ ಆಶ್ರಯದಲ್ಲಿ ಮಲ್ಪೆ ಫಿಷರೀಸ್ ಸರಕಾರಿ ಪ್ರೌಢ ಶಾಲೆಯಲ್ಲಿ ಅಂತರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನಾಚರಣೆಯ ಅಂಗವಾಗಿ ನಡೆದ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆಯ ಜಿಲ್ಲಾ ಸಮಿತಿ ಸದಸ್ಯ ಎ.ಶಿವಕುಮಾರ್ ಅಂಬಲಪಾಡಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಉಡುಪಿ ಪ್ರಾದೇಶಿಕ ಯೋಜನಾಧಿಕಾರಿ ಗಣೇಶ್ ಆಚಾರ್ಯ ಸಂಪನ್ಮೂಲ ವ್ಯಕ್ತಿಯಾಗಿ ಸಮಗ್ರ ಮಾಹಿತಿಯನ್ನು ನೀಡಿ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.ಮುಖ್ಯ ಅತಿಥಿಗಳಾಗಿ ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆಯ ಉಡುಪಿ ತಾಲೂಕು ಅಧ್ಯಕ್ಷ ಸತ್ಯಾನಂದ ನಾಯಕ್, ಉಡುಪಿ ತಾಲೂಕು ಯೋಜನಾಧಿಕಾರಿ ರಾಮ ಎಮ್., ಶಾಲಾ ಮುಖ್ಯೋಪಾಧ್ಯಾಯಿನಿ ಸಂಧ್ಯಾ, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಜಗದೀಶ್ ಸಾಲ್ಯಾನ್, ಕಲ್ಮಾಡಿ ಸಮೃದ್ಧಿ ಒಕ್ಕೂಟದ ಅಧ್ಯಕ್ಷೆ ಇಂದಿರಾ ವಾಸು, ಶಿಕ್ಷಕ ವೃಂದ, ಪ್ರೌಢ ಶಾಲಾ ವಿದ್ಯಾರ್ಥಿಗಳು, ಸೇವಾ ಪ್ರತಿನಿಧಿಗಳು, ಒಕ್ಕೂಟದ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು. ಯೋಜನೆಯ ಅಂಬಲಪಾಡಿ ವಲಯ ಮೇಲ್ವಿಚಾರಕಿ ಪ್ರೇಮಾ ಕಾರ್ಯಕ್ರಮ ನಿರೂಪಿಸಿ, ಸೇವಾ ಪ್ರತಿನಿಧಿ ಗೀತಾ ಹರೀಶ್ ಪಾಲನ್ ವಂದಿಸಿದರು