ಉಡುಪಿ: ನೇಜಾರಿನಲ್ಲಿ ನಡೆದ ತಾಯಿ ಮಕ್ಕಳ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪ್ರವೀಣ್ ಚೌಗುಲೆ ಸಲ್ಲಿಸಿರುವ ಜಾಮೀನು ಅರ್ಜಿಯನ್ನು ತಿರಸ್ಕರಿಸಿ ಉಡುಪಿಯ 2 ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಶನಿವಾರ ಆದೇಶಿಸಿದೆ.
ನ್ಯಾಯಾಂಗ ಬಂಧನದಲ್ಲಿರುವ ಆರೋಪಿ ಪ್ರವೀಣ್ ಚೌಗುಲೆ ಜಾಮೀನು ಕೋರಿ ಡಿ.14 ರಂದು ಅರ್ಜಿಯನ್ನು ವಕೀಲ ಕೆ.ಎಸ್.ಎನ್.ರಾಜೇಶ್ ಮೂಲಕ ಸಲ್ಲಿಸಿದ್ದನು. ಇದಕ್ಕೆ ಸರಕಾರಿ ಅಭಿಯೋಜಕ ಪ್ರಕಾಶ್ ಚಂದ್ರ ಶೆಟ್ಟಿ ಆಕ್ಷೇಪಣೆ ಸಲ್ಲಿದ್ದರು. ಈ ಕುರಿತು ವಾದ ಪ್ರತಿವಾದವನ್ನು ಆಲಿಸಿದ ನ್ಯಾಯಾಧೀಶ ದಿನೇಶ್ ಹೆಗ್ಡೆ ಆರೋಪಿಯ ಜಾಮೀನು ಅರ್ಜಿಯನ್ನು ವಜಾಗೊಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆಯಲ್ಲಿ ಸಂಗ್ರಹಿಸಿರುವ ಸಾಕ್ಷ್ಯಾಧಾರಗಳಿಂದ ಆರೋಪಿ ಅಪರಾಧ ಎಸಗಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ಅಲ್ಲದೆ ಈ ಪ್ರಕರಣದಲ್ಲಿ ಪ್ರತ್ಯಕ್ಷ ಸಾಕ್ಷಿಗಳು ಕೂಡ ಇದ್ದಾರೆ. ಇದೊಂದು ಮರಣದಂಡನೆಗೆ ಶಿಕ್ಷೆ ಕೊಡುವ ಗಂಭೀರ, ಹಾಗೂ ತೀವ್ರ ಸ್ವರೂಪದ ಪ್ರಕರಣ ಮತ್ತು ಪ್ರಕರಣದ ತನಿಖೆ ಇನ್ನೂ ಬಾಕಿ ಇರುವುದರಿಂದ ಜಾಮೀನು ಅರ್ಜಿ ವಜಾ ಮಾಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ