ಹೊಸದಿಲ್ಲಿ: ಇಡೀ ಜಗತ್ತು ಕುತೂಹಲದಿಂದ ನಿರೀಕ್ಷಿಸುತ್ತಿದ್ದ 18ನೇ ಲೋಕಸಭಾ ಚುನಾವಣೆ ವೇಳಾಪಟ್ಟಿಯನ್ನು ಶನಿವಾರ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಘೋಷಿಸಿದ್ದಾರೆ. ದೇಶದ ವಿವಿಧ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಏಪ್ರಿಲ್ 19 ರಿಂದ ಜೂನ್ 1 ರವರೆಗೆ 7 ಹಂತಗಳಲ್ಲಿ ಮತದಾನ ನಡೆಯಲಿದ್ದು, ಜೂ. 4ರಂದು ಫಲಿತಾಂಶ ಪ್ರಕಟಗೊಳ್ಳಲಿದೆ. ಇದರೊಂದಿಗೆ ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವ ಉತ್ಸವಕ್ಕೆ ದೇಶ ಸಜ್ಜಾಗಲಿದೆ. ನೂತನವಾಗಿ ನೇಮಕಗೊಂಡ ಚುನಾವಣಾ ಆಯುಕ್ತರಾದ ಜ್ಞಾನೇಶ್ ಕುಮಾರ್ ಮತ್ತು ಸುಖಬೀರ್ ಸಿಂಗ್ ಸಂಧು ಅವರೊಂದಿಗೆ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ರಾಜೀವ್ ಕುಮಾರ್, ಒಟ್ಟು 22 ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಒಂದೇ ದಿನ ಮತದಾನ ನಡೆಯಲಿದ್ದು, ಉತ್ತರ ಪ್ರದೇಶ, ಬಿಹಾರ ಮತ್ತು ಪಶ್ಚಿಮ ಬಂಗಾಳದಲ್ಲಿ ಎಲ್ಲಾ ಏಳೂ ಹಂತಗಳಲ್ಲಿ ಮತದಾನ ನಡೆಯಲಿದೆ ಎಂದು ತಿಳಿಸಿದರು