Home » ಆತ್ಮೀಯ ಬಂಧುಗಳೇ……
 

ಆತ್ಮೀಯ ಬಂಧುಗಳೇ……

by Kundapur Xpress
Spread the love

ಕಾರವಾರ ಟಿಕೆಟ್ ಕೈತಪ್ಪುತ್ತಿದ್ದಂತೆ ಅನಂತ್ ವಿದಾಯದ ಹೇಳಿಕೆಯನ್ನು ಫೇಸ್‌ಬುಕ್‌ನಲ್ಲಿ ನೀಡಿದ್ದಾರೆ. ಅದರ ಪೂರ್ಣ ವಿವರ ಹೀಗಿದೆ.

ಆತ್ಮೀಯ ಬಂಧುಗಳೇ,

ಈ ಭೂಮಿಯಲ್ಲಿ ನನ್ನ ಲೌಕಿಕ ಬದುಕಿನಿಂದಾಚೆಗೂ ಒಂದು ಭವ್ಯವಾದ ಬದುಕಿದೆ ಎಂದೆನಿಸಿತ್ತು. ಅಂತಹ ಬದುಕನ್ನು ನೋಡುವ ತಹತಹ ಇತ್ತು, ತಳಮಳವೂ ಇತ್ತು. ಸೋಲು-ಗೆಲುವಿನ ಆತಂಕದಿಂದಾಚೆ ಜೀವನವನ್ನು ನಿತ್ಯ ಸತ್ಯವಾಗಿಸುವ ಹಾಗೂ ಎಂದೂ ನಿಲ್ಲದ ಪ್ರವಾಹವಾಗಿಸುವ, ಚೈತನ್ಯದ ಪೂಜೆಯನ್ನಾಗಿಸುವ ಹಂಬಲ ಕಾಡುತ್ತಿತ್ತು.

ಆದರೆ, ಆರಂಭ ಎಲ್ಲಿಂದ ತಿಳಿದಿರಲಿಲ್ಲ. ಜ್ಞಾನಿಗಳು, ಹಣವಂತರು, ಅಧಿಕಾರ ಇದ್ದವರು ಅವರದೇ ಆದ ರೀತಿಯಲ್ಲಿ ಪೂಜೆ ಮಾಡುತ್ತಾರೆ. ಆದರೆ, ಅಂತಹ ಯಾವುದೇ ಉಪಾಧಿಗಳಿಲ್ಲದ ನಾನು ಈ ಪೂಜೆಯನ್ನು ಎಲ್ಲಿಂದ, ಹೇಗೆ ಆರಂಭಿಸಲಿ ಎಂದು ಗೊತ್ತಿರಲಿಲ್ಲ

ಈ ಮಧ್ಯದಲ್ಲಿ ಆರಂಭಗೊಂಡಿದ್ದು ಜನತಾ ಜನಾರ್ದನ ಆರಾಧನೆ. ಸರಿ ಸುಮಾರು ಮೂವತ್ತು ವರ್ಷಗಳ ತಮ್ಮೆಲ್ಲರ ಅಪೂರ್ವ ಒಡನಾಟ, ತಾವು ತೋರಿದ ಸ್ನೇಹ, ಪ್ರೀತಿ, ವಾತ್ಸಲ್ಯ ನಿಜಕ್ಕೂ ಭಾಷೆಗೆ ನಿಲುಕದ್ದು, ಅದು ಅದಮ್ಯ.

ಕಳೆದ 3 ದಶಕಗಳಿಂದ ಹಿಂದವೀ ಹಿತದಲ್ಲಿ ಸೇವೆ ಸಲ್ಲಿಸುವ ಅಪೂರ್ವ ಸುಯೋಗ ಈ ಬದುಕಿನಲ್ಲಿ ನನಗೊಂದು ಗುರುತು ನೀಡಿದೆ. ನಿಜಕ್ಕೂ ಅಷ್ಟೇ ಸಾಕು!!! ಹೆತ್ತ ತಾಯೊಡಲಿಗೆ, ಬದುಕು ಕೊಟ್ಟ ಈ ಮಣ್ಣಿಗೆ ಗುರುತು ಕೊಟ್ಟ ನನ್ನ ಜನಕ್ಕೆ ಸೇವೆಯ ಸೌಭಾಗ್ಯವನ್ನು ಒದಗಿಸಿಕೊಟ್ಟ ಕ್ಷೇತ್ರದ ಜನಮನಕ್ಕೆ ಮತ್ತೊಮ್ಮೆ ಸಾಷ್ಟಾಂಗವೆರಗುತ್ತೇನೆ.

-ಅನಂತಕುಮಾರ ಹೆಗಡೆ

   

Related Articles

error: Content is protected !!