ಬೆಂಗಳೂರು ಮಂಡ್ಯ ಲೋಕಸಭೆ ಕ್ಷೇತ್ರದ ಅಭ್ಯರ್ಥಿಯೂ ಆಗಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರು ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರನ್ನು ಸೌಹಾ ರ್ದಯುತವಾಗಿ ಭೇಟಿ ಮಾಡಿ ಮಾತುಕತೆ ನಡೆಸಿದರು.
ಸೋಮವಾರ ಸದಾಶಿವನಗರದಲ್ಲಿನ ಕೃಷ್ಣ ಅವರ ನಿವಾಸಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ವಿಧಾನ ಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್, ಮಾಜಿ ಸಚಿವರಾದ ಡಾ.ಸಿ.ಎನ್.ಅಶ್ವತ್ಥನಾರಾಯಣ, ಪುಟ್ಟ ರಾಜು, ಯುವ ಜನತಾದಳ ರಾಜ್ಯಾಧ್ಯಕ್ಷನಿಖಿಲ್ ಕುಮಾರ ಸ್ವಾಮಿ ಸೇರಿದಂತೆ ಇತರರು ಉಪಸ್ಥಿತರಿದ್ದರು. ಲೋಕಸಭಾ ಚುನಾವಣೆ ಮತ್ತು ರಾಜ್ಯ ರಾಜಕೀಯ ಕುರಿತು ಉಭಯ ಮುಖಂಡರು ಸಮಾಲೋಚನೆ ನಡೆಸಿದರು.
ಕೃಷ್ಣ ಭೇಟಿ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಕುಮಾರಸ್ವಾಮಿ, ರಾಜ್ಯದ ಮುಖ್ಯಮಂತ್ರಿಗಳಾಗಿ, ಕೇಂದ್ರ ಸಚಿವರಾಗಿ ಎಸ್.ಎಂ.ಕೃಷ್ಣ ಅವರು ನಾಡಿಗೆ ಉತ್ತಮ ಸೇವೆ ಸಲ್ಲಿಸಿದ್ದಾರೆ. ಅವರು ನಮ್ಮ ತಂದೆಯವರ ಸಮಕಾಲೀನರು. ತಂದೆಯವರಿಗಿಂತ ಆರು ತಿಂಗಳು ದೊಡ್ಡವರು. ನಾನು ನಾಮಪತ್ರ ಸಲ್ಲಿಸುವ ಮುನ್ನವೇ ಅವರ ಆಶೀರ್ವಾದ ಪಡೆಯಬೇಕಿತ್ತು. ಇವತ್ತು ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದಿದ್ದೇನೆ ಎಂದರು.