ಬೆಂಗಳೂರು : ಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಪ್ರಕರಣವನ್ನು ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆಗಳು ನಡೆದಿವೆ. ಆರೋಪಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂಬ ಕೂಗು ಎಲ್ಲೆಡೆ ಕೇಳಿಬರುತ್ತಿದೆ. ಅಲ್ಲದೆ ಮಠಾಧೀಶರು, ವಿದ್ಯಾರ್ಥಿಗಳು, ವಿವಿಧ ಸಂಘಟನೆಗಳು ರಾಜ್ಯದ ವಿವಿಧೆಡೆ ಪ್ರತಿಭಟನೆ ನಡೆಸಿ ಮೃತಳ ಕುಟುಂಬಕ್ಕೆ ನ್ಯಾಯ ಸಿಗಬೇಕು ಎಂದು ಒತ್ತಾಯಿಸಿದ್ದಾರೆ.
ನೇಹಾ ಹಿರೇಮಠರನ್ನು ಹತ್ಯೆ ಮಾಡಿದ ವ್ಯಕ್ತಿ ಫಯಾಜ್ ಬಂಧಿಸಿದ ಪೊಲೀಸರು ಮರು ದಿನವೇ ನ್ಯಾಯಾಲಯಕ್ಕೆ ಒಪ್ಪಿಸಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಪೊಲೀಸರು ಎಲ್ಲ ಆಯಾಮದಿಂದ ತನಿಖೆ ಸಂಪೂರ್ಣವಾಗಿ ನಡೆಸಿದ್ದಾರೆಯೇ ಎಂಬ ಪ್ರಶ್ನೆ ಮೂಡುತ್ತಿದೆ. ನೇಹಾಳ ತಂದೆ ನಿರಂಜನ ಹಿರೇಮಠ ಹೇಳಿಕೆ ನೀಡಿ, ಕೊಲೆ ಒಬ್ಬನೇ ಮಾಡಲು ಸಾಧ್ಯವಿಲ್ಲ. ಇವನಿಗೆ ಇನ್ನೂ ಕೆಲವರು ಸಹಕಾರ ನೀಡಿರಬಹುದು ಎಂದು ಆರೋಪಿಸಿ, ಈ ನಿಟ್ಟಿನಲ್ಲಿ ತನಿಖೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.