ಬೆಂಗಳೂರು : ರಾಜ್ಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿರುವ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ಹೊಸ ತಿರುವು ಪಡೆದುಕೊಂಡಿದ್ದು, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಡಿಯೋ ಬಿಡುಗಡೆಯ ಸೂತ್ರಧಾರಿಗಳಾಗಿದ್ದಾರೆ ಎಂದು ವಕೀಲ ದೇವರಾಜೇಗೌಡ ಗಂಭೀರ ಆರೋಪ ಮಾಡಿದ್ದಾರೆ.
ಸೋಮವಾರ ಸಂಜೆ ಬೆಂಗಳೂರಿನಲ್ಲಿ ತುರ್ತು ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಉಪಮುಖ್ಯಮಂತ್ರಿ ಡಿ.ಕೆ.ಶಿವ ಕುಮಾರ್ ಅಮಿಷವೊಡ್ಡಿರುವ ಸಂಭಾಷಣೆಯ ಆಡಿಯೋ ಬಿಡುಗಡೆ ಮಾಡಿ ಮಾತನಾಡಿದರು. ಡಿ.ಕೆ.ಶಿವಕುಮಾರ್ ಈ ಪ್ರಕರಣದಲ್ಲಿ ನಡೆದಿರುವ ఎల్ల ಬೆಳವಣಿಗೆಯ ರೂವಾರಿಯಾಗಿದ್ದಾರೆ. ಪ್ರಕರಣದ ತನಿಖೆ ನಡೆಸುತ್ತಿರುವ ಎಸ್ಐಟಿ ಸರ್ಕಾರದ ಕೈಗೊಂಬೆಯಾಗಿದ್ದು, ಪಾರದರ್ಶಕವಾಗಿ ತನಿಖೆ ನಡೆಯುವ ವಿಶ್ವಾಸ ಇಲ್ಲ. ಈ ಹಿನ್ನೆಲೆಯಲ್ಲಿ ಪ್ರಕರಣದ ತನಿಖೆಯನ್ನು ಸಿಬಿಐಗೆ ನೀಡಬೇಕು ಅಥವಾ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.
ಪ್ರಕರಣದಲ್ಲಿ ಯಾರನ್ನು ಬಂಧಿಸಬೇಕು ಮತ್ತು ಸಿಲುಕಿಸಬೇಕು ಎಂಬುದರ ಕುರಿತು ಸಿದ್ದರಾಮಯ್ಯ ಮತ್ತು ಶಿವಕುಮಾರ್ ನೇತೃತ್ವದಲ್ಲಿ ಗೌಪ್ಯವಾಗಿ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿದ್ದಾರೆ. ಪ್ರಕರಣ ಸಂಬಂಧ ತಮ್ಮ ಬಳಿ ಇರುವ ದಾಖಲೆಗಳನ್ನು ಎಸ್ ಐಟಿಗೆ ನೀಡಿದರೆ ದುರುಪಯೋಗವಾಗುವ ಸಾಧ್ಯತೆ ಇರುವ ಕಾರಣ ನೇರವಾಗಿ ಸಿಬಿಐಗೆ ನೀಡಲಾಗುವುದು ಎಂದು ಹೇಳಿದರು.