ಬೆಂಗಳೂರು : ರಾಜ್ಯದಲ್ಲಿ ಲೋಕಸಭಾ ಚುನಾವಣೆಗೆ ಬಿಜೆಪಿಯಿಂದ ಮೂರು ರೀತಿಯಲ್ಲಿ ಪ್ರಚಾರ ಕೈಗೊಂಡು ಮತದಾರರನ್ನು ತಲುಪುವಲ್ಲಿ ಯಶಸ್ವಿಯಾಗಿದ್ದೇವೆ. ಎಲ್ಲಾ 28 ಕ್ಷೇತ್ರದ ಲ್ಲಿಯೂ ಗೆಲ್ಲುವ ವಿಶ್ವಾಸವನ್ನು ಹೊಂದಿದ್ದೇವೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಹೇಳಿದ್ದಾರೆ.
ಶನಿವಾರ ಮಲ್ಲೇಶ್ವರದಲ್ಲಿನ ಬಿಜೆಪಿ ಕಚೇರಿಯಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅಧ್ಯಕ್ಷತೆಯಲ್ಲಿ ಲೋಕಸಭಾ ಚುನಾವಣೆಯ ಅವಲೋಕನ ಸಭೆ ನಡೆಯಿತು. ಬಳಿಕ ಸುದ್ದಿಗೋಷ್ಠಿಯಲ್ಲಿ ಸಭೆ ವಿವರ ನೀಡಿದ ಸುನಿಲ್ ಕುಮಾರ್, ಲೋಕಸಭಾ ಚುನಾವಣೆ ವೇಳೆ ಬೃಹತ್ ಸಭೆಗಳು, ರೋಡ್ಶೋ ಮತ್ತು ಮನೆಯಂಗಳದಲ್ಲಿನ ಸಭೆಗಳನ್ನು ಯಶಸ್ವಿಯಾಗಿ ನಡೆಸಿದ್ದೇವೆ. ಕಡಿಮೆ ಅವಧಿಯಲ್ಲಿ ಈ ರೀತಿಯಾಗಿ ಮೂರು ರೀತಿಯಲ್ಲಿ ಪ್ರಚಾರ ಕೈಗೊಂಡು ಹೆಚ್ಚು ಜನರನ್ನು ತಲುಪುವ ಪ್ರಯತ್ನ ಮಾಡಲಾಯಿತು ಎಂದು ತಿಳಿಸಿದರು.
ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷಜೆ.ಪಿ.ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ 14 ಮಂದಿ ರಾಷ್ಟ್ರೀಯಮಟ್ಟದ ಮುಖಂಡರು ರಾಜ್ಯದಲ್ಲಿ 79 ಸಾರ್ವಜನಿಕ ಸಭೆಗಳಲ್ಲಿ ಭಾಗವಹಿಸಿದ್ದಾರೆ. 39 ಕಡೆಗಳಲ್ಲಿ ರೋಡ್ ಶೋಗಳು ನಡೆದಿವೆ. ಮಾಜಿ ಮುಖ್ಯ ಮಂತ್ರಿ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತು ಪ್ರತಿಪಕ್ಷ ನಾಯಕ ಆರ್.ಅಶೋಕ್ ಸೇರಿದಂತೆ ಸುಮಾರು 30 ರಾಜ್ಯದ ಮಟ್ಟದ ಪ್ರಮುಖರು 557 ಸಭೆಗಳಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ್ದಾರೆ. 139 ಕಡೆಗಳಲ್ಲಿ ರಾಜ್ಯ ನಾಯಕರು ರೋಡ್ ಶೋ ನಡೆಸಿದ್ದಾರೆ ಎಂದು ವಿವರಿಸಿದರು.