ಉಡುಪಿ : ಜೂನ್ 3ರಂದು ನಡೆಯಲಿರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಜಿಲ್ಲೆಯ ಪ್ರಜ್ಞಾವಂತ ಮತದಾರ ಭಾಂದವರು ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಧಿಕೃತ ಅಭ್ಯರ್ಥಿ ಡಾ! ಧನಂಜಯ ಸರ್ಜಿ ಮತ್ತು ನೈರುತ್ಯ ಶಿಕ್ಷಕರ ಕ್ಷೇತ್ರದ ಎನ್ಡಿಎ ಅಭ್ಯರ್ಥಿ ಎಸ್.ಎಲ್. ಭೋಜೇಗೌಡ ಅವರನ್ನು ದೊಡ್ಡ ಅಂತರದ ಮತಗಳಿಂದ ಗೆಲ್ಲಿಸಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಮನವಿ ಮಾಡಿದ್ದಾರೆ.
ಇತ್ತೀಚೆಗೆ ಪಕ್ಷೇತರ ಅಭ್ಯರ್ಥಿಯ ಕೆಲವು ಬೆಂಬಲಿಗರು ಮತದಾರರನ್ನು ಮೊಬೈಲ್ ಮೂಲಕ ಸಂಪರ್ಕಿಸಿ, ಬಿಜೆಪಿ ಕಛೇರಿಯಿಂದ ಕರೆ ಮಾಡುತ್ತಿರುವುದಾಗಿ ಸುಳ್ಳು ಹೇಳಿಕೊಂಡು ಪಕ್ಷೇತರ ಅಭ್ಯರ್ಥಿಯ ಪರ ಮತ ಯಾಚಿಸುತ್ತಿರುವ ವಿಚಾರ ಪಕ್ಷದ ಗಮನಕ್ಕೆ ಬಂದಿರುತ್ತದೆ. ಅಂತಹ ಯಾವುದೇ ಅಪ್ರಚಾರಗಳಿಗೆ ಸುಶಿಕ್ಷಿತ ಮತದಾರರು ಕಿವಿಗೊಡದೆ ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ! ಧನಂಜಯ ಸರ್ಜಿ ಮತ್ತು ನೈರುತ್ಯ ಶಿಕ್ಷಕರ ಕ್ಷೇತ್ರದ ಎನ್ಡಿಎ ಅಭ್ಯರ್ಥಿ ಎಸ್.ಎಲ್. ಭೋಜೇಗೌಡ ಅವರನ್ನು ಬೆಂಬಲಿಸಿ ಗೆಲ್ಲಿಸಬೇಕು ಎಂದು ಅವರು ವಿನಂತಿಸಿದ್ದಾರೆ.
ಬಿಜೆಪಿ ಅಭ್ಯರ್ಥಿಯ ವಿರುದ್ಧ ಸ್ಪರ್ಧಿಸುತ್ತಿರುವ ಉಡುಪಿಯ ಪಕ್ಷೇತರ ಅಭ್ಯರ್ಥಿ ಬಿಜೆಪಿಯಿಂದ ಉಚ್ಚಾಟನೆಗೊಂಡಿದ್ದರೂ ಪ್ರಧಾನಿ ನರೇಂದ್ರ ಮೋದಿ, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ, ಮಾಜಿ ಉಪ ಪ್ರಧಾನಿ ಲಾಲ್ ಕೃಷ್ಣ ಅಡ್ವಾಣಿ ಸಹಿತ ಬಿಜೆಪಿ ಹಿರಿಯ ಮುಖಂಡರುಗಳಾದ ಮುರಳಿ ಮನೋಹರ ಜೋಶಿ, ಡಾ! ವಿ.ಎಸ್. ಆಚಾರ್ಯ, ಕರಂಬಳ್ಳಿ ಸಂಜೀವ ಶೆಟ್ಟಿ ಅವರ ಭಾವಚಿತ್ರವನ್ನು ತನ್ನ ಚುನಾವಣಾ ಪ್ರಚಾರದ ಪೋಸ್ಟರ್ ಹಾಗೂ ಸೋಶಿಯಲ್ ಮೀಡಿಯಾದಲ್ಲಿ ಬಳಸುತ್ತಿರುವುದನ್ನು ಪಕ್ಷ ತೀವ್ರವಾಗಿ ಖಂಡಿಸುತ್ತದೆ ಎಂದು ಅವರು ತಿಳಿಸಿದ್ದಾರೆ
ರಾಷ್ಟ್ರೀಯ ಸ್ವಯಂಸೇವಕ ಸಂಘದ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಬಿಜೆಪಿ ಶಿವಮೊಗ್ಗ ಜಿಲ್ಲಾ ಉಪಾಧ್ಯಕ್ಷರು ಹಾಗೂ ವೈದ್ಯಕೀಯ ಮತ್ತು ಸಾಮಾಜಿಕ ಕ್ಷೇತ್ರದಲ್ಲಿ ಅತ್ಯಮೂಲ್ಯ ಸೇವೆ ಸಲ್ಲಿಸುತ್ತಿರುವ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ! ಧನಂಜಯ ಸರ್ಜಿ ಹಾಗೂ ಹಿರಿಯ ನ್ಯಾಯವಾದಿ, ಹಾಲಿ ವಿಧಾನ ಪರಿಷತ್ ಸದಸ್ಯರಾಗಿ, ಶಿಕ್ಷಕರ ಧ್ವನಿಯಾಗಿ ಸೇವೆ ಸಲ್ಲಿಸುತ್ತಿರುವ ಎನ್ಡಿಎ ಅಭ್ಯರ್ಥಿ ಎಸ್.ಎಲ್. ಭೋಜೇಗೌಡ ಅವರ ಪರ ಮತದಾರರ ಬೆಂಬಲ ದಿನೇ ದಿನೇ ಹೆಚ್ಚುತ್ತಿರುವುದು ಕಾಂಗ್ರೆಸ್ ಹಾಗೂ ಪಕ್ಷೇತರ ಅಭ್ಯರ್ಥಿಯ ನಿದ್ದೆಗೆಡಿಸಿದೆ.
ಬಿಜೆಪಿ ಕಾರ್ಯಕರ್ತ ಆಧಾರಿತ ವಿಶ್ವದ ಅತಿ ದೊಡ್ಡ ರಾಜಕೀಯ ಪಕ್ಷ. ಕಾರ್ಯಕರ್ತರೇ ಪಕ್ಷದ ಜೀವಾಳ. ಪಕ್ಷದ ರಾಷ್ಟ್ರೀಯ ಮತ್ತು ರಾಜ್ಯ ನಾಯಕರ ಮಾರ್ಗದರ್ಶನದಿಂದ ಪಕ್ಷದ ನಿಷ್ಠಾವಂತ ಕಾರ್ಯಕರ್ತರ ಹುಮ್ಮಸ್ಸು ಇಮ್ಮಡಿಯಾಗಿದೆ. ಈ ನಿಟ್ಟಿನಲ್ಲಿ ಪಕ್ಷದ ಕಾರ್ಯಕರ್ತರು ಚುನಾವಣಾ ಕಾರ್ಯದಲ್ಲಿ ಸಮಾರೋಪಾದಿಯಲ್ಲಿ ಬದ್ಧತೆಯಿಂದ ತೊಡಗಿಸಿಕೊಂಡಿದ್ದು ಪಕ್ಷದ ಅಭ್ಯರ್ಥಿಗಳಾದ ಡಾ! ಧನಂಜಯ ಸರ್ಜಿ ಮತ್ತು ಎಸ್.ಎಲ್. ಭೋಜೇಗೌಡ ಅವರ ಗೆಲುವು ನಿಶ್ಚಿತ ಎಂದು ಕಿಶೋರ್ ಕುಮಾರ್ ಕುಂದಾಪುರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ