ಹೊಸದಿಲ್ಲಿ : ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್ ಡಿಎ) ತನ್ನ ಸಂಸದೀಯ ಪಕ್ಷದ ನಾಯಕರನ್ನಾಗಿ ನರೇಂದ್ರ ಮೋದಿ ಅವರನ್ನು ಶುಕ್ರವಾರ ಅಧಿಕೃತವಾಗಿ ಆಯ್ಕೆ ಮಾಡಿದ್ದು, ಭಾನುವಾರ ಸಂಜೆ 7.15 ರ ಸುಮಾರಿಗೆ ಹೊಸ ಸರ್ಕಾರದ ಪ್ರಮಾಣ ವಚನ ಸಮಾರಂಭ ನೆರವೇರಲಿದೆ.
ಎನ್ಡಿಎ ಸಂಸದೀಯ ಪಕ್ಷದ ನಾಯಕರಾಗಿ ಆಯ್ಕೆಯಾದ ಬಳಿಕ ಸಂಜೆ ರಾಷ್ಟ್ರಪತಿ ಭವನಕ್ಕೆ ಭೇಟಿ ನೀಡಿದ ನರೇಂದ್ರ ಮೋದಿ, ಸರ್ಕಾರ ರಚನೆಗೆ ಹಕ್ಕು ಮಂಡನೆಯ ಮನವಿ ಸಲ್ಲಿಸಿದರು. ಬಳಿಕ ರಾಷ್ಟ್ರಪತಿ ಮುರ್ಮು ಅವರು ನರೇಂದ್ರ ಮೋದಿ ಅವರನ್ನು ನಿಯೋಜಿತ ಪ್ರಧಾನಿಯಾಗಿ ನೇಮಕ ಮಾಡಿದ ಪತ್ರವನ್ನು ಹಸ್ತಾಂತರಿಸಿದರು.