ಬೆಂಗಳೂರು: ನೂತನ ಸಂಸದರು ಜನರ ಧ್ವನಿಯಾಗಿ ಕರ್ನಾಟಕ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ, ಮಲತಾಯಿ ಧೋರಣೆ ವಿರುದ್ಧ ಧ್ವನಿ ಎತ್ತಬೇಕು. ಕಾಂಗ್ರೆಸ್ಗೆ ಮತ ಹಾಕದವರ ಮನ ಗೆಲ್ಲಬೇಕು ಎಂದು ರಾಹುಲ್ ಗಾಂಧಿ ಅವರು ಸಲಹೆ ನೀಡಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಲೋಕಸಭಾ ಚುನಾವಣೆಯಲ್ಲಿ ವಿಜೇತ ಹಾಗೂ ಪರಾಜಿತ ಅಭ್ಯರ್ಥಿಗಳ ಜತೆಗೆ ಪರಾಮರ್ಶೆ ಸಭೆಯಲ್ಲಿ ಮಾತನಾಡಿದ ಅವರು, ಕರ್ನಾಟಕದ 28 ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಗಳ ಜತೆ ಚರ್ಚೆ ಮಾಡಿದರು. ಲೋಕಸಭೆಗೆ ಆಯ್ಕೆಯಾದ 9 ಸಂಸದರಿಗೆ ಅಭಿನಂದನೆ ಸಲ್ಲಿಸಿ ಯಾವ ರೀತಿ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು. ಮೊದಲ ಬಾರಿಗೆ ಗೆದ್ದವರು ಕ್ಷೇತ್ರದಿಂದ ದೂರ ಉಳಿಯಬಾರದು. ಬೆಂಗಳೂರು ಹಾಗೂ ದಿಲ್ಲಿಗಿಂತ ಹೆಚ್ಚಾಗಿ ಕ್ಷೇತ್ರದ ಜನರ ಸಂಪರ್ಕದಲ್ಲಿ ಇರಬೇಕು. ನಮ್ಮದೇ ಸರ್ಕಾರ ರಾಜ್ಯದಲ್ಲಿದ್ದು ಅದರ ನೆರವು ಪಡೆದು ಜನರ ಪರವಾಗಿ ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು. ತೆರಿಗೆ ಅನ್ಯಾಯ, ಕಳಸಾ ಬಂಡೂರಿ, ಮೇಕೆದಾಟು, ಭದ್ರಾ ಮೇಲ್ದಂಡೆ ಯೋಜನೆ ಅನುದಾನ, ಹಣಕಾಸು ಆಯೋಗದ ಅನುದಾನ, ಫೆರಿಫೆರಲ್ ರಿಂಗ್ ರಸ್ತೆ ಸೇರಿದಂತೆ ರಾಜ್ಯಕ್ಕೆ ಬರಬೇಕಾದ ಅನುದಾನ ಹಾಗೂ ಯೋಜನೆಗಳು ಹಾಗೂ ಕೇಂದ್ರದ ಮಲತಾಯಿ ಧೋರಣೆ ವಿರುದ್ಧ ಧ್ವನಿ ಎತ್ತಬೇಕು. ರಾಜ್ಯಕ್ಕೆ ಹಾಗೂ ಮತದಾರರಿಗೆ ನ್ಯಾಯ ಒದಗಿಸಬೇಕು ಎಂದು ರಾಹುಲ್ ಗಾಂಧಿ ಹೇಳಿದರು.