ಬೆಂಗಳೂರು : ಲೋಕಸಭೆ ಚುನಾವಣೆಯಲ್ಲಾದ ಹಿನ್ನಡೆ ಕುರಿತು ಆತ್ಮಾವಲೋಕನ ಹಾಗೂ ಮುಂಬರುವ ವಿಧಾನಸಭೆ ಚುನಾವಣೆಗೆ ಈಗಿನಿಂದಲೇ ತಯಾರಿ ನಡೆಸುವ ಸಲುವಾಗಿ ಉಪಮುಖ್ಯಮಂತ್ರಿ ಡಿ.ಕೆ.ಶಿವ ಕುಮಾರ್ ನೇತೃತ್ವದಲ್ಲಿ ಶುಕ್ರವಾರದಿಂದ ಮೂರು ದಿನಗಳ ಕಾಲ ಮಹತ್ವದ ಸರಣಿ ಸಭೆ ಕೆಪಿಸಿಸಿ ಕಚೇರಿಯಲ್ಲಿ ನಡೆಯಲಿದೆ. ಪ್ರಮುಖವಾಗಿ ಲೋಕಸಭೆ ಚುನಾವಣೆ ಹಾಗೂ ಕಳೆದ ವಿಧಾನಸಭಾ ಚುನಾವಣೆಯ ಪರಾಜಿತ ಅಭ್ಯರ್ಥಿಗಳೊಂದಿಗೆ ನಡೆಯಲಿರುವ ಪ್ರಥಮ ಸಭೆಯಲ್ಲಿ ಈ ಪರಾಜಿತ ಅಭ್ಯರ್ಥಿಗಳು ಈಗಿನಿಂದಲೇ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷವನ್ನು ಸಬಲಗೊಳಿಸುವ ‘ಕಾರ್ಯದಲ್ಲಿ ತೊಡಗುವಂತೆ ಮಾಡಲು ಅವರಿಗೆ ಪಕ್ಷ ಹಾಗೂ ಸರ್ಕಾರದ ಮೂಲಕ ನೀಡಬೇಕಾದ ನೆರವಿನ ಬಗ್ಗೆ ಚರ್ಚೆ ನಡೆಯಲಿದೆ ಎಂದು ಮೂಲಗಳು ಹೇಳಿವೆ.
ಇದಲ್ಲದೆ, ಕೆಪಿಸಿಸಿ ಅಧ್ಯಕ್ಷರೂ ಆದ ಶಿವಕುಮಾರ್ ಅವರು ಗುರುವಾರದಿಂದ ನಾಯಕರು, ಮುಂಚೂಣಿ ಘಟಕಗಳ ಮುಖ್ಯಸ್ಥರು, ವಿವಿಧ ಹಂತದ ಪದಾಧಿಕಾರಿಗಳ ಜತೆ ಸರಣಿ ಸಭೆಗಳನ್ನು ನಡೆಸಲಿದ್ದಾರೆ. ಮುಂದಿನ ವಿಧಾನಸಭೆ ಚುನಾವಣೆಗೆ ನಾಲ್ಕು ವರ್ಷಗಳ ಮೊದಲೇ ಕಾರ್ಯತಂತ್ರ ಆರಂಭಿಸುವ ಉದ್ದೇಶದಿಂದ ಪ್ರಥಮ ಸಭೆ ನಡೆಯಲಿದ್ದು, ಕಳೆದ ವಿಧಾನಸಭೆ ಚುನಾವಣೆ ಯಲ್ಲಿ ಸೋತಿರುವ 90 ಮಂದಿ ಪರಾಜಿತ ಅಭ್ಯ ರ್ಥಿಗಳು ಹಾಗೂ ಎಂಪಿ ಚುನಾವಣೆಯಲ್ಲಿ ಸೋತಿರುವ 19 ಅಭ್ಯರ್ಥಿಗಳನ್ನು ಕರೆಸಿ ಪ್ರತ್ಯೇಕ ಸಭೆ ನಡೆಸಲಾಗುತ್ತದೆ. ಈ ಪೈಕಿ 10 ಸಾವಿರ ಮತಗಳಿಂದ ಸೋತಿರುವ 20 ಮಂದಿಗೆ ಮತ್ತೊಂದು ಸುತ್ತಿನ ಪ್ರತ್ಯೇಕ ಸಭೆ ಏರ್ಪಡಿಸಲಾಗಿದೆ ಎಂದು ತಿಳಿದುಬಂದಿದೆ.