ಬೆಂಗಳೂರು : ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿ ಯೂರಪ್ಪರ ಮೇಲೆ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿ ರಾಜ್ಯ ಸರ್ಕಾರದ ನಡೆ ಹಲವು ಅನುಮಾನಗಳನ್ನು ಹುಟ್ಟು ಹಾಕಿದೆ. ರಾಜಕೀಯ ಕಾರಣಕ್ಕೆ ಈ ಕೇಸನ್ನು ಬಳಸುವ ಅನುಮಾನ ವ್ಯಕ್ತವಾಗಿದೆ ಎಂದು ವಿ.ಪ.ಸದಸ್ಯ ಸಿ.ಟಿ.ರವಿ ಹೇಳಿದರು. ರಾಜ್ಯ ಬಿಜೆಪಿ ಕಾರ್ಯಾಲಯ ದಲ್ಲಿ ಶುಕ್ರವಾರ ಸುದ್ದಿಗೋಷ್ಠಿ ನಡೆಸಿದ ಅವರು, ಪ್ರಕರಣ ದಾಖಲಾಗಿ 3 ತಿಂಗಳ ಕಾಲ ಇಲ್ಲದ ಜೀವ ಈಗ ಯಾಕೆ ಬಂತು? ಈ ಕೇಸಿನ ಮೇಲೆ ಪರಕಾಯ ಪ್ರವೇಶ ಮಾಡಿದವರು ಯಾರು? ದೂರುದಾರೆಯು ಈ ಥರ 50ಕ್ಕೂ ಹೆಚ್ಚು ಗಣ್ಯರ ಮೇಲೆ ದೂರು ನೀಡಿದ್ದರು ಎಂದು ಗೃಹ ಸಚಿವರು ಸಾರ್ವಜನಿಕವಾಗಿ ಹೇಳಿದ್ದರು ಎಂದು ಗಮನ ಸೆಳೆದರು ಮತ್ತು ಮಾನಸಿಕವಾಗಿ ಸ್ವಲ್ಪ ಅಸ್ವಸ್ಥೆ ಎಂಬುದಾಗಿ ಹೇಳಿಕೆ ನೀಡಿದ್ದರು ಎಂದರು.