ಬೆಂಗಳೂರು : ಬರಗಾಲದಂಥ ಸಂಕಷ್ಟದ ಸಂದರ್ಭದಲ್ಲಿ ರಾಜ್ಯದ ಜನರ ಮೇಲೆ ಹೊರೆ ಹಾಕಿರುವುದು ಅಕ್ಷಮ್ಯ ಅಪರಾಧ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಭಂಡತನವನ್ನು ಬಿಟ್ಟು ಪೆಟ್ರೋಲ್, ಡೀಸೆಲ್ ದರ ಏರಿಕೆಯನ್ನು ಹಿಂಪಡೆಯಬೇಕು. ಇಲ್ಲವಾದಲ್ಲಿ ಜೂ.17ರಂದು ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬಿಜೆಪಿ ಪ್ರತಿಭಟನೆ ನಡೆಸಲಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಎಚ್ಚರಿಸಿದ್ದಾರೆ. ದಿನ ಬಳಕೆ ಹಾಗೂ ಅಗತ್ಯ ವಸ್ತುಗಳ ಬೆಲೆಗಳನ್ನು ಸರಣಿ ರೂಪದಲ್ಲಿ ಏರಿಸುತ್ತಲೇ ಇದ್ದೀರಿ, ಇದೀಗ ಪೆಟ್ರೋಲ್ ಹಾಗೂ ಡೀಸೆಲ್ ದರಗಳನ್ನು ಏರಿಸಿ ಜನಸಾಮಾನ್ಯರ ಕೈ ಸುಟ್ಟಿದ್ದೀರಿ. ಈ ಬೆಲೆ ಏರಿಕೆಯ ಪ್ರತಿಕೂಲ ಪರಿಣಾಮ ಸಹಜವಾಗಿಯೇ ಸರಕು ಸಾಗಾಣಿಕೆ ಹಾಗೂ ಸಾರಿಗೆ ದರಗಳೂ ವಿಪರೀತ ಹೆಚ್ಚಳ ಕಂಡು ದಿನಬಳಕೆಯ ಅಗತ್ಯ ವಸ್ತುಗಳ ಬೆಲೆಯೂ ಏರಲಿದೆ ಎಂದಿದ್ದಾರೆ.