ಬೆಂಗಳೂರು : ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣಗಳ ಆರೋಪಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಮತ್ತೆ 14 ದಿನಗಳ ನ್ಯಾಯಾಂಗ ಬಂಧನ ನೀಡಿ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ ಆದೇಶ ಹೊರಡಿಸಿದೆ. ನ್ಯಾಯಾಂಗ ಬಂಧನ ಹಿನ್ನಲೆ ಪ್ರಜ್ವಲ್ ರೇವಣ್ಣ ಅವರನ್ನು ಪೊಲೀಸರು ಬೆಂಗಳೂರು ಕೇಂದ್ರ ಕಾರಾಗೃಹ ಪರಪ್ಪನ ಅಗ್ರಹಾರಕ್ಕೆ ಕರೆದೊಯ್ಯದಿದ್ದಾರೆ. ಎಸ್ಐಟಿ ಕಸ್ಟಡಿಯಲ್ಲಿ ತನಿಖೆ ಎದುರಿಸಿದ್ದ ಪ್ರಜ್ವಲ್ “ರನ್ನು ಎಸ್‌ಐಟಿ ಮಂಗಳವಾರ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ. ನ್ಯಾಯಾಧೀಶ ಕೆ.ಎನ್. ಶಿವಕುಮಾರ್ ವಿಚಾರಣೆ ನಡೆಸುವ ಸಂದರ್ಭ, ಪ್ರಜ್ವಲ್ ರೇವಣ್ಣ, ನಾನು ಎರಡು ಪ್ರಕರಣದಲ್ಲಿ ಮೆಡಿಕಲ್ ಟೆಸ್ಟ್ ಮಾಡಿಸಿಕೊಂಡಿದ್ದೇನೆ. ಆದರೆ ಎಸ್ ಐ ಟಿ ಅಧಿಕಾರಿಗಳು ನನ್ನ ಪುರುಷತ್ವವನ್ನು ಮತ್ತೊಮ್ಮೆ ಪರೀಕ್ಷಿಸಲು ಒತ್ತಾಯಿಸುತ್ತಿದ್ದಾರೆ. ಇದು ತುಂಬಾ ಮುಜುಗರ ಉಂಟುಮಾಡುತ್ತಿದೆ ಎಂದು ಅಳಲು ತೋಡಿಕೊಂಡಿದ್ದಾರೆ. ಇದಕ್ಕೆ ನ್ಯಾಯಾಧೀಶರು ಪ್ರತಿಕ್ರಿಯಿಸಿ, ಅಗತ್ಯ ಮೆಡಿಕಲ್ ಟೆಸ್ಟ್ ಮಾತ್ರ ಮಾಡಿಸಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಸದ್ಯ ನ್ಯಾಯಾಂಗ ಬಂಧನದಲ್ಲಿರುವ ಪ್ರಜ್ವಲ್ ಅವರನ್ನು ಮತ್ತೊಮ್ಮೆ ಕಸ್ಟಡಿಗೆ ಪಡೆಯಲು ಸಿದ್ಧತೆ ನಡೆಸಿದ್ದಾರೆ. ಈ ನಡುವೆ ಪ್ರಜ್ವಲ್ ರೇವಣ್ಣ ಕೂಡ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ. ಇದಕ್ಕೆ ಆಕ್ಷೇಪಣೆ ಸಲ್ಲಿಸಲು ಎಸ್‌ಐಟಿ ಅಧಿಕಾರಿಗಳಿಗೆ ನ್ಯಾಯಾಲಯ ನೊಟಿಸ್ ನೀಡಿದೆ