ಮೈಸೂರು : ರಾಜ್ಯ ಸರ್ಕಾರ ಕೇಂದ್ರ ಸರ್ಕಾರದ ಪ್ರತಿ ನಿರ್ಧಾರದಲ್ಲೂ ತಪ್ಪು ಹುಡುಕುತ್ತಿದೆ. ಆ ಮೂಲಕ ಮೊಸರಲ್ಲಿ ಕಲ್ಲು ಹುಡುಕುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಟೀಕಿಸಿದರು. ಭಾನುವಾರ ಸುದ್ದಿಗಾರರೊಡನೆ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಹೊಸದಾಗಿ ಯಾವುದೇ ಕೈಗಾರಿಕೆ ಬರಲಿಲ್ಲ. ಈಗ ಸಂಡೂರಿನಲ್ಲಿ ಗಣಿಗಾರಿಕೆ ವಿಷಯದಲ್ಲಿ ಹಸ್ತಕ್ಷೇಪ ಮಾಡುತ್ತಿದೆ. ಅಭಿವೃದ್ಧಿ ದೃಷ್ಟಿಯಿಂದ ಕೇಂದ್ರ ಸರ್ಕಾರ ಕೈಗಾರಿಕೆಗೆ ಉತ್ತೇಜನ ನೀಡುತ್ತಿದ್ದು, ರಾಜ್ಯ ಸರ್ಕಾರ ಅದಕ್ಕೂ ತಕರಾರುಮಾಡುತ್ತಿದೆ. ಎಲ್ಲದರಲ್ಲೂ ರಾಜಕೀಯ ಮಾಡುತ್ತಾ ಕುಳಿತರೆ ರಾಜ್ಯ ಅಭಿವೃದ್ಧಿ ಹೇಗೆ ಆಗುತ್ತದೆ ಹೇಳಿ ಎಂದು ಪ್ರಶ್ನಿಸಿದರು
ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಹಿನ್ನಡೆಯಾದ ಮೇಲೆ ಅದರ ಸೇಡು ತೀರಿಸಿಕೊಳ್ಳಲು ಪೆಟ್ರೋಲ್, ಡಿಸೇಲ್ ದರ ಏರಿಕೆ ಮಾಡಿದೆ. ಸರ್ಕಾರ ಜನರ ಮೇಲೆ ಸೇಡಿನ ರಾಜಕಾರಣ ಮಾಡುವುದನ್ನು ನಿಲ್ಲಿಸಬೇಕು. ಕೂಡಲೇ ತೈಲ ಬೆಲೆ ಇಳಿಸಬೇಕು ಎಂದು ಅವರು ಆಗ್ರಹಿಸಿದರು.
ಗ್ಯಾರಂಟಿ ಯೋಜನೆ ನೀಡಿದರೂ ಕೈ ಹಿಡಿಯಲಿಲ್ಲ ಎಂಬ ಸಿಟ್ಟು ರಾಜ್ಯ ಸರ್ಕಾರಕ್ಕಿದೆ. ಹೀಗಾಗಿ ಜನ ವಿರೋಧಿ ನಿರ್ಧಾರಗಳನ್ನು ಕೈಗೊಳ್ಳುತ್ತಿದೆ ಎಂದು ಅವರು ಹೇಳಿದರು.