ಬೆಂಗಳೂರು : ನನ್ನ ಜಾಗ ಖಾಲಿ ಮಾಡಿಸಲು ಕೆಲವರು ಪ್ರಯತ್ನ ಮಾಡಿದ್ದಾರೆ. ಆದರೆ, ಅದು ಯಶಸ್ವಿ ಯಾಗಲ್ಲ, ಅಷ್ಟು ಸುಲಭವಲ್ಲ, ಪಕ್ಷಕ್ಕಾಗಿ ದುಡಿದ ನನ್ನನ್ನು ಖಾಲಿ ಮಾಡಿಸಲು ಆಗುವುದಿಲ್ಲ….
ಸೋಮವಾರ ಕೆಪಿಸಿಸಿ ಕಚೇರಿಯಲ್ಲಿನಡೆದ ಪದಾಧಿಕಾರಿಗಳ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವ ಕುಮಾರ್ ಠೇಂಕರಿಸಿರುವ ಪರಿ ಇದು. ಅಲ್ಲದೆ, ಸಿಎಂ, ಡಿಸಿ ಎಂ ಹಾಗೂ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಮತ್ತು ಸರ್ಕಾರದ ನಿರ್ಧಾರದ ಬಗ್ಗೆ ಬಹಿರಂಗ ಹೇಳಿಕೆ ನೀಡಿದರೆ ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನೂ ನೀಡಿದ್ದಾರೆ. ಪದಾಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ನಾನು ಅಧ್ಯಕ್ಷನಾಗುವ ಮೊದಲು ಪಕ್ಷ ಹೇಗಿತ್ತು. ಈಗ ಹೇಗಿದೆ ಎಂಬುದನ್ನು ನೋಡಬೇಕು. ಪಕ್ಷವನ್ನು ಮತ್ತಷ್ಟು ಬಲಿಷ್ಠಗೊಳಿಸುವ ಹೊಣೆ ನನ್ನ ಮೇಲಿದೆ. ನನ್ನನ್ನು ಯಾರಾದರೂ ಬಗ್ಗಿಸದಹುದು ಎಂದುಕೊಂಡಿದ್ದರೆ ಅದು ಸಾಧ್ಯವಿಲ್ಲ ಎಂದರು. ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಸ್ಥಾನಗಳ ಬದಲಾವಣೆ ಹಾಗೂ ಸರ್ಕಾರದ ವಿರುದ್ಧ ಮಾತನಾಡುವ ಸಚಿವರು ಹಾಗೂ ಶಾಸಕರಿಗೆ ನೋಟಿಸ್ ಜಾರಿ ಮಾಡಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ನಿರ್ಧರಿಸಲಾಗಿದೆ ಎಂದು ಅವರು ತಿಳಿಸಿದರು