ಉಡುಪಿ, : ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಜಿಲ್ಲಾ ಕಾನೂನು ಸೇವೆಗಳ ಸಹಕಾರದಲ್ಲಿ ಉಡುಪಿ, ಕುಂದಾಪುರ, ಕಾರ್ಕಳ, ಬೈಂದೂರು ನ್ಯಾಯಾಲಯದ ಆವರಣದಲ್ಲಿ ಜುಲೈ 13ರಂದು ಬೆಳಗ್ಗೆ 10.30ರಿಂದ ಸಂಜೆ 4ರ ವರೆಗೆ ರಾಷ್ಟ್ರೀಯ ಲೋಕ ಅದಾಲತ್ ಆಯೋಜಿಸಲಾಗಿದೆ ಎಂದು ಪ್ರಧಾನ ಮತ್ತು ಜಿಲ್ಲಾ ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಕಿರಣ್ ಗಂಗಣ್ಣವರ್ ಅವರು ಮಾಹಿತಿ ನೀಡಿದರು.
ಸಾರ್ವಜನಿಕರು ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣ ಹಾಗೂ ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಳ್ಳಲು ಇದು ಉತ್ತಮ ವೇದಿಕೆಯಾಗಿದೆ. ಈಗಾಗಲೇ ನ್ಯಾಯಾಲಯದಲ್ಲಿ ದಾವೇ ಹೂಡಿ, ನ್ಯಾಯಾಲಯದ ಶುಲ್ಕವನ್ನು ಪಾವತಿಸಿದ್ದಲ್ಲಿ, ಲೋಕ ಅದಾಲತ್ನಲ್ಲಿ ಪ್ರಕರಣ ಇತ್ಯರ್ಥಗೊಂಡರೆ, ಕಕ್ಷಿದಾರರಿಗೆ ಶುಲ್ಕವನ್ನು ವಾಪಸು ನೀಡಲಾಗುವುದು. ಲೋಕ್ ಅದಾಲತ್ನಲ್ಲಿ ದಾವೆಗಳು ಇತ್ಯರ್ಥವಾದಲ್ಲಿ ಮೇಲ್ಮನವಿಗೆ ಅವಕಾಶವಿರುವುದಿಲ್ಲ. ಕಕ್ಷಿದಾರರು ತಮ್ಮ ವ್ಯಾಜ್ಯಗಳನ್ನು ವಿಳಂಬವಿಲ್ಲದೆ, ಶೀಘ್ರದಲ್ಲಿಯೇ ಪರಿಹಾರಿಸಿಕೊಳ್ಳಲು ಉತ್ತಮ ಅವಕಾಶವಾಗಿದೆ ಎಂದರು