Home » ನದಿಯಲ್ಲಿ ಕೊಚ್ಚಿ ಹೋಗುತ್ತಿದ್ದ ದನದ ರಕ್ಷಣೆ
 

ನದಿಯಲ್ಲಿ ಕೊಚ್ಚಿ ಹೋಗುತ್ತಿದ್ದ ದನದ ರಕ್ಷಣೆ

by Kundapur Xpress
Spread the love

ಉಪ್ಪಿನಂಗಡಿ : ತುಂಬಿ ಹರಿಯುತ್ತಿರುವ ನೇತ್ರಾವತಿ ನದಿಯಲ್ಲಿ ತೇಲಿ ಬರುತ್ತಿದ್ದ ದನವೊಂದನ್ನು ಉಪ್ಪಿನಂಗಡಿಯಲ್ಲಿರುವ ಗೃಹ ರಕ್ಷಕ ದಳದ ಪ್ರವಾಹ ರಕ್ಷಣಾ ತಂಡ ರಕ್ಷಣೆ ಮಾಡಿ ದಡಕ್ಕೆ ಕರೆದುಕೊಂಡು ಬಂದ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ.

ಬೆಳ್ತಂಗಡಿ ತಾಲೂಕು ಮೊಗ್ರು ಗ್ರಾಮದ ಪುಂಡುಪಿಲ ಎಂಬಲ್ಲಿ ಸುಮಾರು 40 ಅಡಿ ಎತ್ತರದ ಗುಡ್ಡದಿಂದ ತೋಡಿಗೆ ಬಿದ್ದ ಈ ದನವು ನೆರೆ ನೀರಿನಲ್ಲಿ ಕೊಚ್ಚಿಕೊಂಡು ನೇತ್ರಾವತಿ ನದಿಗೆ ಸೇರಿತ್ತು. ತುಂಬಿ ಹರಿಯುತ್ತಿದ್ದ ನೇತ್ರಾವತಿ ನದಿಯಲ್ಲಿ ದನವೊಂದು ಜೀವನ್ಮರಣ ಸ್ಥಿತಿಯಲ್ಲಿ ಕೊಚ್ಚಿಕೊಂಡು ಹೋಗುತ್ತಿರುವುದನ್ನು ಕಂಡ ಟಯರ್ ಅಂಗಡಿಯ ಮಾಲಕ ಚಂದಪ್ಪ ಅವರು ಉಪ್ಪಿನಂಗಡಿಯ ಶ್ರೀ ಸಹಸ್ರಲಿಂಗೇಶ್ವರ-ಮಹಾಕಾಳಿ ದೇವಾಲಯದ ಬಳಿ ಬೀಡು ಬಿಟ್ಟಿರುವ ಪ್ರವಾಹ ರಕ್ಷಣಾ ತಂಡಕ್ಕೆ ಮಾಹಿತಿ ನೀಡಿದರು.

ತಕ್ಷಣವೇ ಕಾರ್ಯಪ್ರವೃತವಾದ ಈ ತಂಡ ತಮ್ಮಲ್ಲಿರುವ ರಬ್ಬರ್‌ ದೋಣಿಯ ಮೂಲಕ ಉಪ್ಪಿನಂಗಡಿ ಬಳಿಯ ನೇತ್ರಾವತಿ ನದಿ ಸೇತುವೆಯ బళి ತೆರಳುತ್ತಿರುವಾಗ ಎದುರಿನಿಂದ ನದಿಯ ಮಧ್ಯ ಭಾಗದಲ್ಲಿ ದನವು ನೀರಿನಲ್ಲಿ ಕೊಚ್ಚಿಕೊಂಡು ಬರುವುದನ್ನು ಕಂಡು ಅಲ್ಲಿಯೇ ಪ್ರಯಾಸದ ಕಾರ್ಯಾಚರಣೆ ನಡೆಸಿ, ದನದ ಮೂಗುದಾರಕ್ಕೆ ಹಗ್ಗವನ್ನು ಕಟ್ಟಿ ದೇವಾಲಯದ ಬಳಿ ದಡಕ್ಕೆ ತಂದು ರಕ್ಷಿಸಿದ್ದಾರೆ

ಗೃಹ ರಕ್ಷಕದಳದ ಪ್ರಭಾರ ಘಟಕಾಧಿಕಾರಿ ದಿನೇಶ್ ಬಿ. ಅವರ ನೇತೃತ್ವದ ಈ ರಕ್ಷಣಾ ಕಾರ್ಯಾಚರಣೆ ತಂಡದಲ್ಲಿ ಎ.ಎಸ್.ಎಲ್. ಜನಾರ್ದನ, ಚರಣ್, ಸುದರ್ಶನ್, ಹಾರೀಸ್, ಸಮದ್ ಭಾಗವಹಿಸಿ ಸಾರ್ವಜನಿಕರ ಪ್ರಶಂಸೆಗೆ ಪಾತ್ರರಾಗಿದ್ದಾರೆ

   

Related Articles

error: Content is protected !!