ಬೆಂಗಳೂರು : ಮುಡಾ ಭೂ ಹಗರಣ ಖಂಡಿಸಿ, ಮುಖ್ಯಮಂತ್ರಿ ಸಿದ್ದರಾಮಯ್ಯರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಜಂಟಿಯಾಗಿ ಹಮ್ಮಿಕೊಂಡಿರುವ ಮೈಸೂರು ಚಲೋ ಪಾದಯಾತ್ರೆಗೆ ಶನಿವಾರ ಕೆಂಗೇರಿಯಲ್ಲಿ ಚಾಲನೆ ಸಿಕ್ಕಿದ್ದು, ಮೊದಲ ದಿನ 16 ಕಿ.ಮೀ. ಸಾಗಿತು
ಕೆಂಗೇರಿಯ ಕೆಂಪಮ್ಮ ದೇವಸ್ಥಾನ ಬಳಿ ನಡೆದ ಸಮಾವೇಶದಲ್ಲಿ ನಗಾರಿ ಬಾರಿಸುವ ಮೂಲಕ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮತ್ತು ಜೆಡಿಎಸ್ ರಾಜ್ಯಾಧ್ಯಕ್ಷ ಮತ್ತು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸೇರಿದಂತೆ ಉಭಯ ಪಕ್ಷಗಳ ನಾಯಕರು ಈ ಪಾದಯಾತ್ರೆಗೆ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಬಿ.ವೈ. ವಿಜಯೇಂದ್ರ, ಸುಳ್ಳು ಭರವಸೆ ನೀಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ವಚನ ಭ್ರಷ್ಟವಾಗಿದೆ. ಭ್ರಷ್ಟಾಚಾರದಲ್ಲಿ ಮುಳುಗಿದೆ. ಅಹಿಂದ ವರ್ಗದವರಿಗೆ ಸಾಮಾಜಿಕ ನ್ಯಾಯ ಕೊಡುವುದಾಗಿ ಹೇಳಿದ್ದ ಸಿದ್ದರಾಮಯ್ಯ ಸರ್ಕಾರ ಪರಿಶಿಷ್ಟ ಸಮುದಾಯದ ವಾಲ್ಮೀಕಿ ಅಭಿವೃದ್ಧಿ ನಿಗಮದ 187 ಕೋಟಿ ಹಣವನ್ನು ಲೂಟಿ ಮಾಡಿದೆ. ಮುಡಾದಲ್ಲಿ ಬಡವರಿಗೆ ನಿವೇಶನಗಳನ್ನು ವಂಚಿಸಿದ್ದು ಸುಮಾರು 5 ಸಾವಿರ ಕೋಟಿ ರೂ. ಹಗರಣ ನಡೆದಿದೆ. ಭ್ರಷ್ಟ ಅಧಿಕಾರಿಗಳಿಗೆ ಸ್ವತಃ ಮುಖ್ಯಮಂತ್ರಿಗಳೇ ಬೆಂಬಲ, ರಕ್ಷಣೆ ಕೊಡುತ್ತಿದ್ದಾರೆ. ಇಂತಹ ವಚನಭ್ರಷ್ಟ ಮತ್ತು ಭ್ರಷ್ಟಾಚಾರದಲ್ಲಿ ಮುಳುಗಿರುವ ಕಾಂಗ್ರೆಸ್ ಸರ್ಕಾರವನ್ನು ಕಿತ್ತೊಗೆಯುವ ಶಕ್ತಿ ಮೈಸೂರು ಚಲೋ ಪಾದಯಾತ್ರೆಗಿದೆ ಎಂದರು.