ಉಡುಪಿ: ಮುಡಾ ಪ್ರಕರಣದಲ್ಲಿ ರಾಜ್ಯಪಾಲರು ಅಭಿಯೋಜನೆಗೆ ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಆಗ್ರಹಿಸಿ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಅವರ ನೇತೃತ್ವದಲ್ಲಿ ಇಂದು (ಆ.19) ಮಧ್ಯಾಹ್ನ ಗಂಟೆ 3.30ಕ್ಕೆ ಬಿಜೆಪಿ ಜಿಲ್ಲಾ ಕಚೇರಿಯ ಬಳಿ ಬೃಹತ್ ಪ್ರತಿಭಟನೆ ನಡೆಯಲಿದೆ ಎಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನಕರ ಶೆಟ್ಟಿ ಹೆರ್ಗ ತಿಳಿಸಿದ್ದಾರೆ.
ಈ ಪ್ರತಿಭಟನೆಯಲ್ಲಿ ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ, ಕಾರ್ಕಳ ಶಾಸಕ ಹಾಗೂ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ.ಸುನೀಲ್ ಕುಮಾರ್, ಜಿಲ್ಲೆಯ ಶಾಸಕರುಗಳಾದ ಯಶ್ಪಾಲ್ ಎ.ಸುವರ್ಣ, ಗುರ್ಮೆ ಸುರೇಶ್ ಶೆಟ್ಟಿ ಕಿರಣ್ ಕುಮಾರ್ ಕೊಡ್ಲಿ, ಗುರುರಾಜ್ ಗಂಟಿಹೊಳೆ, ವಿಧಾನ ಪರಿಷತ್ ಸದಸ್ಯ ಡಾ. ಧನಂಜಯ ಸರ್ಜಿ ಸಹಿತ ಪಕ್ಷದ ಮುಖಂಡರು, ವಿವಿಧ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ ಎಂದು ದಿನಕರ ಶೆಟ್ಟಿ ಹೆರ್ಗ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.