ಬೆಂಗಳೂರು : ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಮಾಜಿ ಸಚಿವರಾದ ಜನಾರ್ದನ ರೆಡ್ಡಿ, ಶಶಿಕಲಾ ಜೊಲ್ಲೆ ಹಾಗೂ ಮುರುಗೇಶ್ ನಿರಾಣಿ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ಕೋರಿ ಲೋಕಾಯುಕ್ತ ಪೊಲೀಸರು ಸಲ್ಲಿಸಿರುವ ಮನವಿಗಳನ್ನು ಶೀಘ್ರವಾಗಿ ಇತ್ಯರ್ಥಪಡಿಸುವಂತೆ ರಾಜ್ಯಪಾಲರಿಗೆ ಸಲಹೆ ನೀಡುವ ತೀರ್ಮಾನವನ್ನು ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ತೆಗೆದು ಕೊಳ್ಳಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯು, ಪ್ರತಿಪಕ್ಷಗಳ ನಾಯಕರ ಮೇಲೆ ಪ್ರಾಸಿಕ್ಯೂಷನ್ ಗೆ ಅನುಮತಿ ಕೋರಿ ಬಾಕಿ ಇರುವ ಅರ್ಜಿಗಳ ಇತ್ಯರ್ಥಕ್ಕೆ ನೆರವು ಮತ್ತು ಸಲಹೆ ನೀಡಲು ನಿರ್ಧರಿಸಿದೆ. ತನ್ಮೂಲಕ ಪ್ರಾಸಿಕ್ಯೂಷನ್ಗೆ ಒತ್ತಡ ಹೇರುವ ಪ್ರಯತ್ನ ಮಾಡಿದೆ. ಈ ಬಗ್ಗೆ ಕಾನೂನು ಸಚಿವ ಎಚ್. ಕೆ.ಪಾಟೀಲ್ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದರು.