ಬೆಂಗಳೂರು : ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ನಾಯಕರು ಶನಿವಾರ ವಿಧಾನಸೌಧದಿಂದ ರಾಜಭವನ ಚಿಲೋ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದು, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸೇರಿ ವಿಪಕ್ಷ ನಾಯಕರ ವಿರುದ್ದ ಪ್ರಾಸಿಕ್ಯೂಷನ್ ಅರ್ಜಿಗಳಿಗೆ ಅನುಮತಿ ನೀಡುವಂತೆ ಆಗ್ರಹ ಮಾಡಿದ್ದಾರೆ.
ವಿಧಾನಸೌಧದ ಗಾಂಧೀಜಿ ಪ್ರತಿಮೆ ಎದುರು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಶನಿವಾರ ಬೆಳಗ್ಗೆ ಪ್ರತಿಭಟನೆ ನಡೆಸಲಾಯಿತು. ಈ ವೇಳೆ ರಾಜ್ಯಪಾಲರ ವಿರುದ್ಧ ಘೋಷಣೆ ಕೂಗಿದ ನಾಯಕರು, ‘ಗೆಹಲೋತ್ ಹಟಾವೋ ಪ್ರಜಾಪ್ರಭುತ್ವ ಬಚಾವೋ’, ‘ರಾಜ್ಯಪಾಲರಲ್ಲ ಬಿಜೆಪಿಯ ಆಜ್ಞಾ ಪಾಲಕರು’ ‘ಪಕ್ಷಪಾತಿ ರಾಜ್ಯಪಾಲ, ಇವರು ಬಿಜೆಪಿ ಚೇಲಾ’ ಎಂಬ ಬರಹಗಳ ಭಿತ್ತಿಪತ್ರ ಪ್ರದರ್ಶಿಸಿ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪ ಮೊಯ್ಲಿ ಸೇರಿದಂತೆ ಎಲ್ಲಾ ಸಚಿವರು, ಶಾಸಕರು ಹಾಗೂ ಕೆಪಿಸಿಸಿ ಪದಾಧಿಕಾರಿಗಳು ರಾಜಭವನದವರೆಗೆ ಕಾಲ್ನಡಿಗೆ ಜಾಥಾ ನಡೆಸಿದರು.