ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ(ಮುಡಾ) ನಡೆದಿರುವ ನಿವೇಶನ ಹಂಚಿಕೆಯ ಬಹುಕೋಟಿ ಹಗರಣ ಪ್ರಕರಣದಲ್ಲಿ ಮೊದಲ ವಿಕೆಟ್ ಪತನವಾಗಿದೆ. ಇಡೀ ಪ್ರಕರಣದಲ್ಲಿ ಆರೋಪಕ್ಕೆ ಗುರಿಯಾಗಿದ್ದ ಮುಡಾದ ಈ ಹಿಂದಿನ ಆಯುಕ್ತ ಜಿ.ಟಿ. ದಿನೇಶ್ ಕುಮಾರ್ ಅವರನ್ನು ಅಮಾನತುಗೊಳಿಸಿ ಸರ್ಕಾರ ಆದೇಶಿಸಿದೆ. ಕೆ.ಎ.ಎಸ್ ಅಧಿಕಾರಿ ದಿನೇಶ್ ಕುಮಾರ್ ಅವರ ಮೇಲೆ ಮುಡಾ ಅಕ್ರಮ ಕುರಿತು ಗಂಭೀರ ಆರೋಪಗಳಿವೆ ಅನ್ನೋ ಕಾರಣಕ್ಕೆ ಅಮಾನತು ಮಾಡಲಾಗಿದೆ ಎಂದು ತಿಳಿದು ಬಂದಿದೆ
ಬದಲಿ ನಿವೇಶನ ಹಂಚಿಕೆ ಹಗರಣ ಸಂಬಂದ ಮೈಸೂರು ನ’ಗ’ರಾಭಿ ವೃದ್ಧಿ ಪ್ರಾಧಿಕಾರದ ಹಿಂದಿನ ಆಯುಕ್ತ, ಹಾಲಿ ಹಾವೇರಿ ವಿಶ್ವವಿದ್ಯಾಲಯದ ಕುಲಸಚಿವರಾಗಿ ನೇಮಕವಾಗಿದ್ದ ಜಿ.ಟಿ ದಿನೇಶ್ ಕುಮಾರ್ ಅವರನ್ನು ಮೊದಲು ಸರ್ಕಾರ ಮುಡಾ ಆಯುಕ್ತ ಸ್ಥಾನದಿಂದ ಎತ್ತಂಗಡಿ ಮಾಡಿತ್ತು. ಆದರೆ ಸಸ್ಪೆಂಡ್ ಮಾಡಿರಲಿಲ್ಲ. ಇದು ಬಿಜೆಪಿ ಸೇರಿದಂತೆ ವಿಪಕ್ಷಗಳನ್ನು ತೀವ್ರವಾಗಿ ಕೆರಳಿಸಿತ್ತು. ಬಿಜೆಪಿ-ಜೆಡಿಎಸ್ ಜಂಟಿಯಾಗಿ ಮೈಸೂರು ಚಲೋ ಪಾದಯಾತ್ರೆ ನಡೆಸಿತ್ತು. ಮೈಸೂರಿನ ಮಹಾರಾಜ ಕಾಲೇಜ್ನಲ್ಲಿ ಬೃಹತ್ ಸಮಾವೇಶವನ್ನು ನಡೆಸಿ, ಪ್ರಕರಣ ಪ್ರಮುಖ ಆರೋಪಿಯಾಗಿರುವ ಜಿ.ಟಿ ದಿನೇಶ್ ಕುಮಾರ್ ಅವರನ್ನು ಕೂಡಲೇ ಅಮಾನತು ಮಾಡುವಂತೆ ಪಟ್ಟು ಹಿಡಿಯಲಾಗಿತ್ತು. ಆದರೆ ಸರ್ಕಾರ ಈ ಬಗ್ಗೆ ಕ್ರಮ ಕೈಗೊಂಡಿರಲಿಲ್ಲ. ಸಸ್ಪೆಂಡ್ ಮಾಡುವ ಬದಲು ದಿನೇಶ್ ಕುಮಾರ್ ಅವರನ್ನು ಹಾವೇರಿ ವಿಶ್ವವಿದ್ಯಾಲಯದ ಕುಲಸಚಿವರಾಗಿ ಸರ್ಕಾರ ವರ್ಗಾಯಿಸಿತ್ತು. ಇದು ವಿಪಕ್ಷದವರನ್ನು ತೀವ್ರವಾಗಿ ಕೆರಳಿಸಿತ್ತು. ಮೈಸೂರಿನ ಕೆ.ಆರ್.ಕ್ಷೇತ್ರದ ಬಿಜೆಪಿ ಶಾಸಕ ಟಿ.ಎಸ್. ಶ್ರೀವತ್ಸ ಅವರು, ಕಳೆದ ಮೂರು ದಿನಗಳ ಹಿಂದೆಯಷ್ಟೇ ಮುಡಾ ನಿವೇಶನ ಹಗರಣಕ್ಕೆ ಸಂಬಂಧಿಸಿದಂತೆ ಈ ಹಿಂದಿನ ಮಾಜಿ ಆಯುಕ್ತರುಗಳಾದ ನಟೇಶ್ ಹಾಗೂ ಜಿ.ಟಿ.ದಿನೇಶ್ ಕುಮಾರ್ ವಿರುದ್ಧ ಲೋಕಾಯುಕ್ತದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಿಗೆ ದೂರು ನೀಡಿದ್ದರು. ಇದರ ಬೆನ್ನಲ್ಲೆ ಇದೀಗ ರಾಜ್ಯಪಾಲರ ಆದೇಶಾನುಸಾರವಾಗಿ ದಿನೇಶ್ ಕುಮಾರ್ ಅವರನ್ನ ಸಸ್ಪೆಂಡ್ ಮಾಡಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ