ಹಾಸನ : ವಿವಾದಗಳಿಂದಲೇ ಸುದ್ದಿಯಾಗಿದ್ದ ರಾಜ್ಯದ ಏಳು ಬರಪೀಡಿತ ಜಿಲ್ಲೆಗಳಿಗೆ ಕುಡಿಯುವ ನೀರೊದಗಿಸುವ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಎತ್ತಿನಹೊಳೆ ಯೋಜನೆಯ ಮೊದಲ ಹಂತಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಶುಕ್ರವಾರ ಸಕಲೇಶಪುರ ತಾಲೂಕಿನ ಹೆಬ್ಬನಹಳ್ಳಿ ಬಳಿ ಚಾಲನೆ ನೀಡಲಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ವಾರದ ಹಿಂದೆಯೇ ಯೋಜನೆಗೆ ಪ್ರಾಯೋಗಿಕ ಚಾಲನೆ ನೀಡಿದ್ದರು
ಇದೀಗ ಗೌರಿ ಹಬ್ಬದ ದಿನದಂದೇ ಯೋಜನೆಯ ಮೊದಲ ಹಂತ ಅಧಿಕೃತವಾಗಿ ಉದ್ಘಾಟನೆಯಾಗಲಿದೆ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಪಶ್ಚಿಮ ಘಟ್ಟದ ಮೇಲ್ಬಾಗದಲ್ಲಿ ಹರಿಯುವ ಎತ್ತಿನಹೊಳೆ, ಕಾಡುಮನೆಹೊಳೆ, ಕೇರಿಹೊಳೆ ಮತ್ತು ಹೊಂಗದಹಳ್ಳದಿಂದ ರಾಜ್ಯದ ಬರಪೀಡಿತ ಜಿಲ್ಲೆಗಳಿಗೆ ನೀರೊದಗಿಸುವ ಈ ಯೋಜನೆಗೆ 2014ರಲ್ಲಿ ಶುರುವಾಗಿತ್ತು. ಸುಮಾರು ಎಂಟು ಸಾವಿರ ಕೋಟಿ ಅಂದಾಜು ವೆಚ್ಚದೊಂದಿಗೆ ಆರಂಭವಾದ ಈ ಯೋಜನೆಯ ಮೊದಲ ಹಂತ ಇದೀಗ ಉದ್ಘಾಟನೆಗೆ ಸಿದ್ದವಾಗಿದೆ. ಇನ್ನು ಮೂರು ವರ್ಷಗಳಲ್ಲಿ ಯೋಜನೆ ಪೂರ್ಣಗೊಳ್ಳುವ ನಿರೀಕ್ಷೆ ಇದೆ.