ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ದೋಷಾರೋಪ ಪಟ್ಟಿಯಲ್ಲಿರುವ ಗೌಪ್ಯ ಮಾಹಿತಿಯನ್ನ ಪ್ರಕಟ ಹಾಗೂ ಪ್ರಸಾರ ಮಾಡದಂತೆ ಮಾಧ್ಯಮಗಳಿಗೆ ನಿರ್ಬಂಧ ವಿಧಿಸಿ ಹೈಕೋರ್ಟ್ ಮಂಗಳವಾರ ಮಧ್ಯಂತರ ಆದೇಶ ಮಾಡಿದೆ. ಕೊಲೆ ಪ್ರಕರಣ ಸಂಬಂಧ ತಮ್ಮ ವಿರುದ್ಧದ ಮಾಹಿತಿ ಪ್ರಸಾರ ಮಾಡದಂತೆ ಮಾಧ್ಯಮಗಳಿಗೆ ನಿರ್ಬಂಧ ವಿಧಿಸಲು ಕೋರಿ ನಟ ದರ್ಶನ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೇಮಂತ್ ಚಂದನ ಗೌಡರ್ ಅವರಿದ್ದ ನ್ಯಾಯಪೀಠ ಈ ಆದೇಶ ಮಾಡಿದೆ. ಅರ್ಜಿ ಕುರಿತ ಮುಂದಿನ ವಿಚಾರಣೆಗೆವರೆಗೆ ದೋಷಾರೋಪ ಪಟ್ಟಿಯಲ್ಲಿನ ಗೌಪ್ಯ ಮಾಹಿತಿಯನ್ನು ಮಾಧ್ಯಮಗಳು ಪ್ರಕಟ ಹಾಗೂ ಪ್ರಸಾರ ಮಾಡಬಾರದು.
ಅರ್ಜಿಯಲ್ಲಿ ಪ್ರತಿವಾದಿಗಳಾಗಿರುವ 37 ಮಾಧ್ಯಮಗಳಿಗೆ ಈ ಆದೇಶ ಪ್ರತಿಯನ್ನು ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ರವಾನಿಸಿ ಮಾಹಿತಿ ನೀಡಬೇಕು. ಮಾಧ್ಯಮಗಳು ಕೇಬಲ್ ಟೆಲಿವಿಷನ್ ನೆಟ್ವರ್ಕ್ಸ್ ಅಧಿನಿಯಮಗಳು- 1994ರ ಉಲ್ಲಂಘಿಸಿದರೆ, ಅವುಗಳ ವಿರುದ್ದ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಸೂಕ್ತ ಕ್ರಮ ಕೈಗೊಳ್ಳಬಹುದು ಎಂದು ನಿರ್ದೇಶಿಸಿರುವ ಹೈಕೋರ್ಟ್, ಪ್ರತಿವಾದಿಯಾಗಿರುವ 37 ಮಾಧ್ಯಮಗಳಿಗೆ ತುರ್ತು ನೋಟಿಸ್ ಜಾರಿ ಮಾಡಿದೆ