ಬೆಂಗಳೂರು : ತೀವ್ರ ಕುತೂಹಲ ಮೂಡಿಸಿದ್ದ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಸಮರದಲ್ಲಿ ‘ಸೈನಿಕನ ಚಕ್ರವ್ಯೂಹವನ್ನು ಭೇದಿಸಲು ‘ಅಭಿಮನ್ಯು’ ನಿಖಿಲ್ ಕುಮಾರಸ್ವಾಮಿಯನ್ನು ಕಣಕ್ಕಿಳಿಸಲು ಎನ್‌ಡಿಎ ಮೈತ್ರಿಕೂಟ ಸರ್ವಾನು ಮತದಿಂದ ನಿರ್ಣಯಿಸಿದೆ.
ಉಪ ಚುನಾವಣೆಯ ಅಖಾಡ ಸಜ್ಜಾಗಿದ್ದು ಆಡಳಿತಾರೂಢ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸಿ.ಪಿ. ಯೋಗೇಶ್ವರ್ ಅವರನ್ನು ಎದುರಿಸಲು ಜೆಡಿಎಸ್-ಬಿಜೆಪಿ ಮೈತ್ರಿ ಕೂಟ ತನ್ನ ಅಭ್ಯರ್ಥಿಯನ್ನಾಗಿ ಮಾಜಿ ಮುಖ್ಯಮಂತ್ರಿ ಎಚ್ .ಡಿ.ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಅವರನ್ನು ಘೋಷಿಸಿದೆ. ಇದರಿಂದಾಗಿ ಯೋಗೇಶ್ವರ್ ಮತ್ತು ನಿಖಿಲ್ ನಡುವೆ ನೇರ ಹಣಾಹಣಿ ನಡೆಯಲಿದೆ.
ಯೋಗೇಶ್ವರ್ ಅವರು ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಬೆನ್ನಲ್ಲೇ ನಿಖಿಲ್ ಕುಮಾರಸ್ವಾಮಿ ಅವರನ್ನು ಕಣಕ್ಕಿಳಿಸುವ ಬಗ್ಗೆ ಜೆಡಿಎಸ್ ಚಿಂತನೆ ನಡೆಸಿತ್ತು. ಆ ಪ್ರಕಾರ ಗುರುವಾರ ಮಧ್ಯಾಹ್ನ ಜೆಡಿಎಸ್ ನಾಯಕರು ಬಿಜೆಪಿಯ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನಿವಾಸಕ್ಕೆ ತೆರಳಿ ಕೆಲಕಾಲ ಸಭೆ ನಡೆಸಿದರು. ಬಳಿಕ ಸ್ವತಃ ಯಡಿಯೂರಪ್ಪ ಅವರೇ ನಿಖಿಲ್ ಕುಮಾರಸ್ವಾಮಿ ಅವರ ಹೆಸರನ್ನು ಅಧಿಕೃತವಾಗಿ ಪ್ರಕಟಿಸಿದರು.
ತಂದೆ ಕುಮಾರಸ್ವಾಮಿ ಅವರ ರಾಜೀನಾಮೆಯಿಂದ ತೆರವಾಗಿರುವ ಕ್ಷೇತ್ರಕ್ಕೆ ಈಗ ಅವರ ಪುತ್ರ ನಿಖಿಲ್ ಕುಮಾರ ಸ್ವಾಮಿಯೇ ಅಖಾಡಕ್ಕಿಳಿಯಲಿದ್ದು ಇಂದು ಶುಕ್ರವಾರ ನಾಮಪತ್ರ ಸಲ್ಲಿಸಲಿದ್ದಾರೆ. ಈ ಹಿಂದೆ ಮಂಡ್ಯ ಲೋಕಸಭಾ ಚುನಾವಣೆ, ರಾಮನಗರ ವಿಧಾನಸಭಾ ಚುನಾವಣೆ ಸೇರಿ ಎರಡು ಬಾರಿ ಚುನಾವಣೆಯಲ್ಲಿ ಸೋಲು ಕಂಡಿದ್ದ ನಿಖಿಲ್ ಮೂರನೇ ಬಾರಿಗೆ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ.