ಉಡುಪಿ : ರಾಜ್ಯದ ಕೆಲವು ಜಿಲ್ಲೆಗಳ ರೈತರ ಭೂಮಿ ಮತ್ತು ಮಠ ಮಂದಿರಗಳ ಪಹಣಿಯಲ್ಲಿ ವಕ್ಸ್ ಎಂದು ನಮೂದಾಗಿರುವ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾದ್ಯಂತ ಹಿಂದೂಗಳು ಹಾಗೂ ರೈತರಿಗಾಗುತ್ತಿರುವ ಅನ್ಯಾಯದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದು, ಜಿಲ್ಲೆಯಲ್ಲಿಯೂ ನ.6ರಂದು ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಕಿಶೋರ್‌ಕುಮಾರ್ ಕುಂದಾಪುರ ತಿಳಿಸಿದರು.
ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಉಡುಪಿ ಜಿಲ್ಲೆಯ ಶಿವಳ್ಳಿ ಗ್ರಾಮವನ್ನೂ ಸುಲ್ತಾನ್ ಪುರ ಎಂದು ಪಹಣಿಯಲ್ಲಿ ನಮೂದಾಗಿರವುದು ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ನ.4 ಮತ್ತು 5ರಂದು ಜಿಲ್ಲೆಯ ಎಲ್ಲ ತಾಲೂಕು ಮಟ್ಟದಲ್ಲಿ ತಹಶೀಲ್ದಾರರಿಗೆ ಮನವಿ ನೀಡಲಾಗುವುದು ಎಂದರು.
ನ. 6ರಂದು ಬೆಳಿಗ್ಗೆ 10 ಗಂಟೆಗೆ ಮಣಿಪಾಲ ಕಾಯಿನ್ ಸರ್ಕಲ್‌ನಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ಮೆರವಣಿಗೆಯಲ್ಲಿ ತೆರಳಿ, ಜಿಲ್ಲಾಧಿಕಾರಿಗೆ ಮನವಿ ನೀಡಲಾಗುವುದು. ಬಿಜೆಪಿ ರಾಜಕೀಯ ಉದ್ದೇಶಕ್ಕಾಗಿ ಪ್ರತಿಭಟನೆ ಮಾಡುತ್ತಿಲ್ಲ, ಬದಲಾಗಿ ಜನರಲ್ಲಿ ಜಾಗೃತಿ ಮೂಡಿಸಲು ಕಾರ್ಯಕ್ರಮ ಹಮ್ಮಿಕೊಂಡಿದ್ದು ಪಕ್ಷಾತೀತವಾಗಿ ರೈತರು, ದಲಿತರು, ಸಾರ್ವಜನಿಕರು ಸೇರಿದಂತೆ ಒಂದು ಸಾವಿರಕ್ಕೂ ಅಧಿಕ ಮಂದಿ ಪ್ರತಿಭಟನೆಯಲ್ಲಿ ಭಾಗವಹಿಸುವರು ಎಂದರು.
ರೈತರಿಗೆ ನೋಟಿಸ್ ನೀಡಿರುವುದನ್ನು ಹಿಂಪಡೆಯುವಂತೆ ಅಧಿಕಾರಿಗಳಿಗೆ ಸಿಎಂ ನೀಡಿರುವ ಸೂಚನೆ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಕಿಶೋರ್‌ಕುಮಾರ್, ಇದು ಜನತೆಯ ಕಣ್ಣೀರೊರೆಸುವ ತಂತ್ರ. ಪಹಣಿ ಬದಲಾವಣೆ ಬಗೆಗಿನ ಮಾಧ್ಯಮ ವರದಿ ಮತ್ತು ಬಿಜೆಪಿ ಪ್ರತಿಭಟನೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ತಂತ್ರಗಾರಿಕೆ ಅನುಸರಿಸುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.
ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಹೆರ್ಗ ದಿನಕರ ಶೆಟ್ಟಿ ಮತ್ತು ರೇಷ್ಮಾ ಉದಯ ಶೆಟ್ಟಿ, ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿಲ್ಪ ಜಿ. ಸುವರ್ಣ ಹಾಗೂ ಜಿಲ್ಲಾ ಮಾಧ್ಯಮ ಪ್ರಮುಖ್ ಶ್ರೀನಿಧಿ ಹೆಗ್ಡೆ ಉಪಸ್ಥಿತರಿದ್ದರು.