ಬೆಂಗಳೂರು : ವಕ್ಸ್ ಮಂಡಳಿಯು ರಾಜ್ಯಾದ್ಯಂತ ರೈತರ ಜಮೀನು ಕಬಳಿಸಲು ಸಚಿವ ಜಮೀರ್ ಅಹ್ಮದ್ ಖಾನ್ ಕುಮ್ಮಕ್ಕು ಕಾರಣವೆಂದು ಆಕ್ರೋಶ ವ್ಯಕ್ತವಾಗುತ್ತಿರುವ ಬೆನ್ನಲ್ಲೇ ಜಮೀರ್ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ.
ನ್ಯಾಯಾಂಗ ನಿಂದನೆಯ ಆರೋಪ ಎದುರಿಸುತ್ತಿರುವ ಸಚಿವ ಜಮೀರ್ ಅಹಮದ್ ಖಾನ್ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ರಾಜ್ಯಪಾಲ ಥಾವರಚಂದ್ ಗೆಹಲೋತ್ ಆದೇಶ ನೀಡಿದ್ದಾರೆ. ಈ ಬಗ್ಗೆ ರಾಜ್ಯಪಾಲರು ತಮ್ಮ ವಿಶೇಷ ಕಾರ್ಯದರ್ಶಿ ಮೂಲಕ ಅಡ್ವಕೇಟ್ ಜನರಲ್‌ಗೆ ಪತ್ರ ಬರೆದು, ನ್ಯಾಯಾಂಗ ನಿಂದನೆ ಆರೋಪ ಎದುರಿಸುತ್ತಿರುವ ಜಮೀರ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದ್ದಾರೆ.
ಜಮೀರ್ ಹೈಕೋರ್ಟ್ ತೀರ್ಪಿನ ವಿರುದ್ಧ ಗಂಭೀರ ಆರೋಪ ಮಾಡಿ ನ್ಯಾಯಾಂಗ ವ್ಯವಸ್ಥೆಯನ್ನೇ ಪ್ರಶ್ನಿಸಿದ್ದಾರೆ. ಹಾಗಾಗಿ ಅವರ ವಿರುದ್ಧ ನ್ಯಾಯಾಂಗ ನಿಂದನೆ ಮೊಕದ್ದಮೆ ದಾಖಲಿಸಲು ಅನುಮತಿ ನೀಡಬೇಕು. ಎಂದು ಕೋರಿ ಟಿ. ಜೆ. ಅಬ್ರಹಾಂ ರಾಜ್ಯಪಾಲರಿಗೆ ಅ.21ಕ್ಕೆ ಮನವಿ ಸಲ್ಲಿಸಿದ್ದರು. ತಾವು ಸಲ್ಲಿಸಿರುವ ದೂರಿನ ಅರ್ಜಿಯನ್ನು ತ್ವರಿತವಾಗಿ ವಿಲೇವಾರಿ ಮಾಡುವಂತೆ ಅಡ್ವಕೇಟ್ ಜನರಲ್ ಗೆ ನಿರ್ದೇಶನ ನೀಡುವಂತೆ ಟಿ.ಜೆ. ಅಬ್ರಹಾಂ ರಾಜ್ಯಪಾಲರಿಗೆ ಮನವಿ ಮಾಡಿದ್ದರು.
ಏನಿದು ಪ್ರಕರಣ ?
ಮುಡಾ ಹಗರಣ ಸಂಬಂಧ ರಾಜ್ಯಪಾಲರು ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಅನುಮತಿ ನೀಡಿದ್ದರು. ರಾಜ್ಯಪಾಲರ ಈ ಆದೇಶ ಪ್ರಶ್ನಿಸಿ ಸಿಎಂ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಇದರ ವಿಚಾರಣೆ ನಡೆಸಿದ ಏಕಸದಸ್ಯ ಪೀಠವು, ರಾಜ್ಯಪಾಲರ ಕ್ರಮ ಸರಿಯಿದೆ ಎಂದು ತೀರ್ಪು ನೀಡಿತ್ತು. ಈ ತೀರ್ಪಿನ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದ ಸಚಿವ ಜಮೀರ್ ಅಹಮದ್ ಖಾನ್, ಇದೊಂದು ರಾಜಕೀಯ ತೀರ್ಪು ಎಂದು ವಿವಾದಿತ ಹೇಳಿಕೆ ನೀಡಿದ್ದರು. ಈ ಹೇಳಿಕೆಯನ್ನು ನ್ಯಾಯಾಂಗ ನಿಂದನೆ ಎಂದು ಆರೋಪಿಸಿ ಟಿ.ಜೆ. ಅಬ್ರಹಾಂ, ಅಡ್ವಕೇಟ್ ಜನರಲ್‌ಗೆ ದೂರು ನೀಡಿದ್ದರು.