ಬೆಂಗಳೂರು : ಆಗಾಗ ವಿವಾದಾತ್ಮಕ ಹೇಳಿಕೆ ನೀಡುತ್ತಿರುವ ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ಧ ಕಾಂಗ್ರೆಸ್ ಪಕ್ಷದಲ್ಲೇ ತೀವ್ರ ಆಕ್ರೋಶ ವ್ಯಕ್ತವಾ ಗಿದ್ದು, ಖುದ್ದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವ ಕುಮಾರ್ ಸೇರಿದಂತೆ ಹಲವರು ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕೇಂದ್ರ ಸಚಿವ ಕುಮಾರಸ್ವಾಮಿ ಅವರನ್ನು ಕರಿಯ ಎಂದು ಕರೆದ ಜಮೀರ್ ಹೇಳಿಕೆ ತಪ್ಪು ಎಂದು ಡಿಕೆಶಿ ಒಪ್ಪಿದ್ದು ಜಮೀರ್ ಅವರನ್ನು ತಿದ್ದುವ ಕೆಲಸ ಮಾಡುತ್ತೇವೆ ಎಂದು ಸೂಚ್ಯವಾಗಿ ಹೇಳಿದ್ದಾರೆ.
ಇದೇ ವೇಳೆ ಕಾಂಗ್ರೆಸ್ನ ಮುಸ್ಲಿಂ ನಾಯಕ ಹಾಗೂ ಕೆಪಿಸಿಸಿ ಉಪಾಧ್ಯಕ್ಷ ಎ.ಆರ್.ಎಂ. ಹುಸೇನ್ ಅವರು, ‘ನಿರ್ಣಾಯಕ ಚುನಾವಣೆ ಸಂದರ್ಭದಲ್ಲಿ ಪಕ್ಷಕ್ಕೆ ಮುಜುಗರ ಉಂಟು ಮಾಡಿರುವ ಸಚಿವ ಜಮೀರ್ ಅಹಮದ್ ವಿರುದ್ಧ ಪಕ್ಷ ಶಿಸ್ತಿನ ಕ್ರಮ ಕೈಗೊಳ್ಳಬೇಕು’ ಎಂದು ಪತ್ರಿಕಾ ಹೇಳಿಕೆ ಮೂಲಕ ಬಹಿರಂಗವಾಗಿ ಆಗ್ರಹಿಸಿದ್ದಾರೆ.