ಮಂಗಳೂರು : ವೈವಿಧ್ಯತೆಯಲ್ಲಿ ಏಕತೆಯೇ ಭಾರತದ ಮೂಲ ಅಂಶ. ಆದರೆ ಇತ್ತೀಚೆಗೆ ದೇಶದಲ್ಲಿ ಸಾಮರಸ್ಯ ಹದಗೆಡುತ್ತಿದೆ. ಸಮಾಜ ಧ್ರುವೀಕರಣಗೊಳ್ಳುತ್ತಿದೆ. ಈ ಬಗ್ಗೆ ಎಚ್ಚರ ಅತೀ ಅಗತ್ಯ ಎಂದು ಉಪರಾಷ್ಟ್ರಪತಿ ಜಗದೀಪ್ ಧನಕರ್ ಕಳವಳ ವ್ಯಕ್ತಪಡಿಸಿದರು.
ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭಕ್ತಾದಿಗಳಿಗೆ ಸುಸಜ್ಜಿತ ಸೌಕರ್ಯಗಳೊಂದಿಗೆ ಆರಾಮದಾಯಕ ಸರತಿ ಸಾಲಿನ ವ್ಯವಸ್ಥೆಗಳನ್ನೊಳಗೊಂಡ ನೂತನ ಸಂಕೀರ್ಣ ‘ಶ್ರೀ ಸಾನ್ನಿಧ್ಯ’ ಮತ್ತು 2024-25ರ ಧರ್ಮ ಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ‘ಜ್ಞಾನದೀಪ’ ಕಾರ್ಯಕ್ರಮಕ್ಕೆ ಮಂಗಳವಾರ ಚಾಲನೆ ನೀಡಿ ಅವರು ಮಾತನಾಡಿದರು. ಪ್ರಜಾಪ್ರಭುತ್ವ ನಮಗೆ ಎಲ್ಲ ಸ್ವಾತಂತ್ರ್ಯ ಕೊಟ್ಟಿದೆ. ಅಭಿಪ್ರಾಯ ಹೇಳಿಕೊಳ್ಳುವ ಸ್ವಾತಂತ್ರ್ಯ ಇದೆ. ಸಶಕ್ತ ಪ್ರಜಾಪ್ರಭುತ್ವ ನಮ್ಮಲ್ಲಿದೆ ಜನರ ಅಭಿಪ್ರಾಯಕ್ಕೆ ಬೆಲೆ ಇದೆ. ಜನಪ್ರತಿನಿಧಿಗಳು ಜನರ ಆದ್ಯತೆಗೆ ಬೆಲೆ ಕೊಡಬೇಕಿದೆ. ಸಂವಿಧಾನವೇ ನಮ್ಮಲ್ಲಿ ಪರಮೋಚ್ಚವಾದುದು. ಜನರ ಮತಕ್ಕೆ ಬೆಲೆ ಇದ್ದರೆ ಮಾತ್ರ ಸಶಕ್ತ ಪ್ರಜಾಪ್ರಭುತ್ವ ಸಾಧ್ಯ ಎಂದು ಅವರು ಹೇಳಿದರು
ನಾವು ರಾಜಕೀಯವಾಗಿ ಇನ್ನಷ್ಟು ಪ್ರಬಲರಾಗಬೇಕು. ದೇಶವನ್ನು ಮತ್ತಷ್ಟು ಎತ್ತರಕ್ಕೆ ಒಯ್ಯಲು ಒಗ್ಗೂಡಬೇಕು. ಮೆಸಪಟೋಮಿಯಾ, ಚೀನಾ ನಾಗರಿಕತೆ ನಾಶವಾಗಿದೆ. ಆದರೆ ನಮ್ಮ ನಾಗರಿಕತೆ ಮಾತ್ರ ಇನ್ನೂ ಬೆಳೆಯುತ್ತಿದೆ. ಬಾಹ್ಯ ಶಕ್ತಿಗಳು ನಮ್ಮನ್ನು ಅಸ್ಥಿರಗೊಳಿಸದಂತೆ ಎಚ್ಚರಿಕೆ ವಹಿಸಬೇಕು ಎಂದು ಉಪರಾಷ್ಟ್ರಪತಿ ಹೇಳಿದರು