ಮಂಗಳೂರಿನ: ನೂರಕ್ಕೂ ಮಿಕ್ಕಿ ದೇವಸ್ಥಾನ, ದೈವಸ್ಥಾನ, ಗರಡಿಗಳಲ್ಲಿ ಪೂಜೆ ಸಲ್ಲಿಸಿ ಮಗಳೂರು ನಗರ ದಕ್ಷಿಣದಲ್ಲಿ ನನ್ನ ಗೆಲುವಿಗಾಗಿ ಪ್ರಾರ್ಥಿಸಿ ಪ್ರಸಾದ ತಂದು ನನಗೆ ನೀಡಿರುವ ಎಲ್ಲಾ ಹಿರಿಯರಿಗೆ, ಮುಖಂಡರಿಗೆ ಧನ್ಯವಾದಗಳು. ಒಂದು ದಿನದ ಹಿಂದೆಯಷ್ಟೇ ಮಾಹಿತಿ ಸಿಕ್ಕಿದರೂ ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿದ ಕಾರ್ಯಕರ್ತ ಬಂಧುಗಳಿಗೆ ವಂದನೆಗಳು. ಕಳೆದ ಐದು ವರ್ಷಗಳಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರದ 4000 ಕೋಟಿ ರೂ ಮಿಕ್ಕಿ ಅನುದಾನ ತಂದು ನಮ್ಮ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿ ಮಾಡಲಾಗಿದೆ. ಇನ್ನು ಸಾಕಷ್ಟು ಅಭಿವೃದ್ಧಿ ಮಾಡಲಿದ್ದು, 2025-26 ರ ಒಳಗೆ ಮಂಗಳೂರು ಅಭಿವೃದ್ಧಿಯ ನಿಟ್ಟಿನಲ್ಲಿ ಹೊಸ ರೂಪ ಪಡೆದುಕೊಳ್ಳಲಿದೆ.
ಕುದ್ರೋಳಿ ದೇವಸ್ಥಾನದಲ್ಲಿ ಪ್ರತಿ ಬಾರಿ ದೇವರಿಗೆ ಪೂಜೆ ಸಲ್ಲಿಸಿ ನಾಮಪತ್ರ ಸಲ್ಲಿಸುವ ಸಂಪ್ರದಾಯ ಪಾಲಿಸಿದ್ದೇನೆ. ಅದೇ ರೀತಿಯಲ್ಲಿ ಕದ್ರಿ ದೇವಸ್ಥಾನ, ಮಂಗಳಾದೇವಿ ದೇವಸ್ಥಾನ, ರಥಬೀದಿ ವೆಂಕಟರಮಣ ದೇವಸ್ಥಾನ, ಬಜಿಲಕೇರಿ ಮುಖ್ಯಪ್ರಾಣ ದೇವಸ್ಥಾನಕ್ಕೂ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ್ದೇನೆ. ಇಂದಿನ ನಾಮಪತ್ರ ಸಲ್ಲಿಸುವಾಗ ಸೇರಿದ ಜನಸ್ತೋಮವನ್ನು ನೋಡುವಾಗ ಇದು ಗೆಲುವಿನ ನಂತರದ ವಿಜಯಯಾತ್ರೆಯಂತೆ ಕಂಗೊಳಿಸುತ್ತಿದೆ. ರಾಜ್ಯಾಧ್ಯಕ್ಷರೂ, ನೆಚ್ಚಿನ ಸಂಸದರಾದ ನಳಿನ್ ಕುಮಾರ್ ಕಟೀಲು ಅವರು ಕುದ್ರೋಳಿ ದೇವಸ್ಥಾನಕ್ಕೆ ಆಗಮಿಸಿ ವಿಜಯ ಯಾತ್ರೆಗೆ ಶುಭ ಕೋರಿದ್ದಾರೆ. ನಮ್ಮ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ ಕಾರ್ಯಕರ್ತರು ಬೃಹತ್ ಸಂಖ್ಯೆಯಲ್ಲಿ ಸೇರಿರುವುದಕ್ಕೆ ಸರ್ವರಿಗೂ ಧನ್ಯವಾದ ಅರ್ಪಿಸುತ್ತೇನೆ ಎಂದು ಮಂಗಳೂರು ನಗರ ದಕ್ಷಿಣ ಬಿಜೆಪಿ ಅಭ್ಯರ್ಥಿ ಡಿ ವೇದವ್ಯಾಸ ಕಾಮತ್ ಹೇಳಿದರು.