ಉಡುಪಿ: ಜಿಲ್ಲೆಯ ಎಲ್ಲಾ ಸರಕಾರಿ ಕಚೇರಿಗಳಲ್ಲಿ ಸಾರ್ವಜನಿಕರು ಅರ್ಜಿ ಸಲ್ಲಿಸಿದಾಗ ಅವುಗಳನ್ನು ನಿಯಮಾನುಸಾರವಾಗಿ, ಪಾರದರ್ಶಕವಾಗಿ, ತ್ವರಿತವಾಗಿ ವಿಲೇವಾರಿ ಮಾಡಿ ಸಮಸ್ಯೆಗಳನ್ನು ಇತ್ಯರ್ಥಪಡಿಸಲು ಅಧಿಕಾರಿಗಳು ಮುಂದಾಗಬೇಕೆಂದು ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ ಕೆ. ಸೂಚನೆ ನೀಡಿದರು.ಅವರು ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ನಡೆದ, ಜಿಲ್ಲೆಯ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ತಮ್ಮ ಕರ್ತವ್ಯದ ಅವಧಿಯಲ್ಲಿ ಕಚೇರಿಯಲ್ಲಿ ಉಪಸ್ಥಿತರಿದ್ದು, ಕಾಲಮಿತಿಯೊಳಗೆ ಕಡತಗಳ ವಿಲೇವಾರಿ ಮಾಡಬೇಕು. ಸಾರ್ವಜನಿಕರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಿ ಅವುಗಳ ಕುರಿತುಅಗತ್ಯ ಕ್ರಮ ಕೈಗೊಳ್ಳುವ ಮೂಲಕ , ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕು ಎಂದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್, ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್ ಹಾಗೂ ಜಿಲ್ಲಾ ಮಟ್ಟದ ಅನುಷ್ಠಾನಾಧಿಕಾರಿಗಳು ಉಪಸ್ಥಿತರಿದ್ದರು.