ಮಂಗಳೂರು :“ಡ್ರಗ್ಸ್ ಫ್ರಿ ಮಂಗಳೂರು” ಮಾಡುವ ನಿಟ್ಟಿನಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಮುಂದುವರಿಸಿದ ಕಾರ್ಯಾಚರಣೆಯಲ್ಲಿ ಮಂಗಳೂರು ನಗರದಾದ್ಯಂತ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾದಕ ವಸ್ತುವಾದ (Methylene dioxy methamphetamine) MDMA ನ್ನು ಮಾರಾಟ ಮಾಡುತ್ತಿದ್ದ ಇಬ್ಬರನ್ನು ಸಿಸಿಬಿ ಪೊಲೀಸರು ದಸ್ತಗಿರಿ ಮಾಡಿದ್ದಾರೆ
ಮಂಗಳೂರು ನಗರದ ಕೆ ಎಸ್ ರಾವ್ ರಸ್ತೆ ಪರಿಸರದಲ್ಲಿ ವ್ಯಕ್ತಿಗಳಿಬ್ಬರು ಅಕ್ರಮವಾಗಿ MDMA ಮಾದಕ ವಸ್ತುವನ್ನು ವಶದಲ್ಲಿರಿಸಿಕೊಂಡು ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿ MDMA ಎಂಬ ನಿಷೇದಿತ ಮಾದಕ ವಸ್ತುವನ್ನು ಹೊಂದಿದ ಪಿ.ಎಸ್. ಅಬ್ದುಲ್ ಅಜೀಜ್ ಯಾನೆ ಅಜೀಜ್(31ವರ್ಷ) ಹಾಗೂ ಅಕ್ಷಿತ್ ಕುಮಾರ್(26ವರ್ಷ) ಎಂಬವರನ್ನು ವಶಕ್ಕೆ ಪಡೆದುಕೊಂಡು ಅವರಿಂದ ಒಟ್ಟು 35 ಗ್ರಾಂ ತೂಕದ ರೂ. 1,75,000/-ಮೌಲ್ಯದ ಎಂಡಿಎಂಎ ಮಾದಕ ವಸ್ತು, ಮೊಬೈಲ್ ಫೋನ್ ಗಳು-2, ನಗದು ರೂ. 600/- ಡಿಜಿಟಲ್ ತೂಕ ಮಾಪನವನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ ರೂ 1,96,000/- ಆರೋಪಿಗಳ ವಿರುದ್ಧ ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಈ ಮಾದಕ ವಸ್ತು ಮಾರಾಟ ಪ್ರಕರಣದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಪತ್ತೆ ಕಾರ್ಯ ಮುಂದುವರಿದಿದೆ.
ಆರೋಪಿಗಳ ಪೈಕಿ ಅಬ್ದುಲ್ ಅಜೀಜ್ @ ಅಜೀಜ್ ಎಂಬಾತನ ವಿರುದ್ಧ ಈ ಹಿಂದೆ ಉಪ್ಪಿನಂಗಡಿ, ವಿಟ್ಲ ಹಾಗೂ ಉರ್ವಾ ಪೊಲೀಸ್ ಠಾಣೆಯಲ್ಲಿ ಮಾದಕ ವಸ್ತು ಮಾರಾಟಕ್ಕೆ ಸಂಬಂಧಿಸಿದ ಮೂರು ಪ್ರಕರಣ ದಾಖಲಾಗಿರುತ್ತದೆ. ಇತ್ತೀಚೆಗೆ ಸುಮಾರು 15 ದಿನಗಳ ಹಿಂದೆ ನ್ಯಾಯಾಲಯದಿಂದ ಜಾಮೀನು ಪಡೆದುಕೊಂಡು ಬಿಡುಗಡೆಗೊಂಡಿದ್ದ ಈತ ಮತ್ತೆ ಅದೇ ಮಾದಕ ವಸ್ತು ಮಾರಾಟ ದಂಧೆ ನಡೆಸುತ್ತಿದ್ದನು.
ಈ ಮಾದಕ ವಸ್ತು ಮಾರಾಟ ಜಾಲದ ಪತ್ತೆ ಕಾರ್ಯವನ್ನು ಮಂಗಳೂರು ನಗರದ ಮಾನ್ಯ ಪೊಲೀಸ್ ಆಯುಕ್ತರವರಾದ ಶ್ರೀ ಅನುಪಮ್ ಅಗರ್ ವಾಲ್ ರವರ ಮಾರ್ಗದರ್ಶನದಲ್ಲಿ ಸಿಸಿಬಿ ಘಟಕದ ಅಧಿಕಾರಿ ಮತ್ತು ಸಿಬ್ಬಂದಿಯವರು ನಡೆಸಿದ್ದಾರೆ