ಕುಂದಾಪುರ : ಪ್ರಾಕೃತಿಕ ವಿಕೋಪ ನಿರ್ವಹಣೆ ಮತ್ತು ಕುಡಿಯುವ ನೀರಿನ ಸಮಸ್ಯೆ ಕುರಿತು ಕುಂದಾಪುರ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಶನಿವಾರ ಕುಂದಾಪುರ ವಿಧಾನಸಭಾ ಕ್ಷೇತ್ರದ *ಶಾಸಕರಾದ ಎ. ಕಿರಣ್ ಕುಮಾರ್ ಕೊಡ್ಗಿ ಅವರ* ಅಧ್ಯಕ್ಷತೆಯಲ್ಲಿ ಟಾಸ್ಕ್ ಫೋರ್ಸ್ ಸಭೆ ನಡೆಯಿತು.
ತಾಲೂಕಿನ ವಿವಿಧೆಡೆ ಎದುರಾಗಿರುವ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಗ್ರಾಮ ಪಂಚಾಯತ್ ಪಿಡಿಒಗಳು ಮಾಹಿತಿ ನೀಡಿದರು. ಈ ವೇಳೆ ಕುಡಿಯುವ ನೀರು ಪೂರೈಕೆ ಏಜೆನ್ಸಿಯ ಅಧಿಕಾರಿಗಳು ಸಭೆಗೆ ಗೈರಾಗಿದ್ದಕ್ಕೆ ಶಾಸಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿ ಗರಂ ಆದರು. “ಕುಡಿಯುವ ನೀರು ಜನರ ಮೂಲಭೂತ ಅವಶ್ಯಕತೆ. ಈ ವಿಚಾರದಲ್ಲಿ ಬೇಜವಾಬ್ದಾರಿ ಸಲ್ಲದು, ಅಧಿಕಾರಿಗಳು ಕಡ್ಡಾಯವಾಗಿ ಸಭೆಗೆ ಹಾಜರಾಗಬೇಕು” ಎಂದು ಖಡಕ್ ಎಚ್ಚರಿಕೆ ನೀಡಿದರು.
ಮುಂದಿನ ಬರಗಾಲಕ್ಕೆ ಮುಂಜಾಗ್ರತಾ ಕ್ರಮ ಹಾಗೂ ಸಮಸ್ಯೆಗಳ ಶಾಶ್ವತ ಪರಿಹಾರದ ಬಗ್ಗೆ ಸಭೆಯಲ್ಲಿ ಸವಿಸ್ತಾರ ಚರ್ಚೆ ನಡೆಯಿತು.
ಸಭೆಯಲ್ಲಿ ಕುಂದಾಪುರ ತಹಶೀಲ್ದಾರ್ ಪ್ರದೀಪ್ ಕುರುಡೇಕರ್, ಬ್ರಹ್ಮಾವರ ತಹಶೀಲ್ದಾರ್ ಶ್ರೀಕಾಂತ್ ಹೆಗಡೆ, ಕುಂದಾಪುರ ತಾ.ಪಂ ಪ್ರಭಾರ ಇಒ ಮಹೇಶ್ ಕೆ.ಜಿ, ಹೆಬ್ರಿ ತಾ.ಪಂ ಪ್ರಭಾರ ಇಒ ದಿನೇಶ್, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಆಡಳಿತಾಧಿಕಾರಿಗಳು ಹಾಗೂ ವಿವಿಧ ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು.
