Home » ಕಳವು ಪ್ರಕರಣ: ಅಂತರ ಜಿಲ್ಲಾ ಕಳ್ಳನ ಬಂಧನ, ₹4 ಲಕ್ಷ ಮೌಲ್ಯದ ಚಿನ್ನಾಭರಣ ವಶ
 

ಕಳವು ಪ್ರಕರಣ: ಅಂತರ ಜಿಲ್ಲಾ ಕಳ್ಳನ ಬಂಧನ, ₹4 ಲಕ್ಷ ಮೌಲ್ಯದ ಚಿನ್ನಾಭರಣ ವಶ

by Kundapur Xpress
Spread the love

ಬ್ರಹ್ಮಾವರ: ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಪ್ರಮುಖ ಕಳ್ಳತನ ಪ್ರಕರಣವೊಂದನ್ನು ಭೇದಿಸುವಲ್ಲಿ ಬ್ರಹ್ಮಾವರ ಪೊಲೀಸರು ಯಶಸ್ವಿಯಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಅಂತರ ಜಿಲ್ಲಾ ಕಳ್ಳನನ್ನು ಬಂಧಿಸಲಾಗಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ಸ್ವತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಬ್ರಹ್ಮಾವರ ಪೊಲೀಸ್ ಠಾಣಾ ವ್ಯಾಪ್ತಿಯ ಕಾಡೂರು ಗ್ರಾಮದ ತಂತ್ರಾಡಿ ಎಂಬಲ್ಲಿನ ಮನೆಯೊಂದರಲ್ಲಿ ಕಳ್ಳತನ ನಡೆದಿತ್ತು. ಮನೆಯಲ್ಲಿ ಇರಿಸಲಾಗಿದ್ದ ಅಂದಾಜು ₹4,00,000/- ಮೌಲ್ಯದ, ಸುಮಾರು 38 ಗ್ರಾಂ ತೂಕದ ಚಿನ್ನದ ಕರಿಮಣಿ ಸರವನ್ನು ಕಿಡಿಗೇಡಿಗಳು ಕಳವು ಮಾಡಿದ್ದರು. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ದೂರನ್ನು ಗಂಭೀರವಾಗಿ ಪರಿಗಣಿಸಿದ ಬ್ರಹ್ಮಾವರ ಪೊಲೀಸರು ತನಿಖೆ ಕೈಗೊಂಡು, ಮೂಡು ಬಾರಾಳಿ ನಿವಾಸಿ ಮಂಜುನಾಥ ಶೆಟ್ಟಿ (47) ಯನ್ನು ಬಂಧಿಸಿದ್ದಾರೆ. ಆರೋಪಿಯಿಂದ ಕಳವು ಮಾಡಲಾಗಿದ್ದ ₹4 ಲಕ್ಷ ಮೌಲ್ಯದ ಚಿನ್ನಾಭರಣವನ್ನು ವಶಪಡಿಸಿಕೊಳ್ಳಲಾಗಿದೆ. ಅಲ್ಲದೆ ಕೃತ್ಯಕ್ಕೆ ಬಳಸಲಾಗಿದ್ದ ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿ ಕಳವು ಮಾಡಲಾಗಿದ್ದ ಬೈಕ್ ಅನ್ನು ಸಹ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಶ್ರೀ ಹರಿರಾಮ್ ಶಂಕರ್ ಐ.ಪಿ.ಎಸ್ ರವರ ಆದೇಶದಂತೆ ಶ್ರೀ ಸುಧಾಕರ್ ನಾಯ್ಕ್ (ಹೆಚ್ಚುವರಿ ಪೊಲೀಸ್ ಅಧೀಕ್ಷಕರು), ಶ್ರೀ ಬೆಳ್ಳಿಯಪ್ಪ (ಪೊಲೀಸ್ ಉಪಾಧೀಕ್ಷಕರು, ಉಡುಪಿ ಉಪ ವಿಭಾಗ) ಅವರ ಮಾರ್ಗದರ್ಶನದಲ್ಲಿ
ಬ್ರಹ್ಮಾವರ ಠಾಣಾ ಪಿ.ಎಸ್.ಐ ಅಶೋಕ್ ಮಾಳಬಗಿ, ಅಪರಾಧ ವಿಭಾಗದ ಸಿಬ್ಬಂದಿಗಳಾದ ಕಿರಣ್, ಸಿದ್ದಪ್ಪ ಸಕನಳ್ಳಿ ಅವರ ತಂಡ ಯಶಸ್ವಿ ಕಾರ್ಯಾಚರಣೆ ನಡೆಸಿದೆ.

ಪೊಲೀಸರ ಈ ತ್ವರಿತಗತಿಯ ಕಾರ್ಯಾಚರಣೆಗೆ ಸಾರ್ವಜನಿಕ ವಲಯದಲ್ಲಿ ಶ್ಲಾಘನೆ ವ್ಯಕ್ತವಾಗಿದೆ

 

Related Articles

error: Content is protected !!