Home ಕರಾವಳಿ ಸುದ್ದಿMDMA ಮಾರಾಟ ಮತ್ತು ಸಾಗಾಟ ಆರೋಪದ ಮೇಲೆ ಮೂವರ ಬಂಧನ

MDMA ಮಾರಾಟ ಮತ್ತು ಸಾಗಾಟ ಆರೋಪದ ಮೇಲೆ ಮೂವರ ಬಂಧನ

Three arrested on charges of selling and transporting MDMA

by Kundapur Xpress

ಮಂಗಳೂರು:‌ ನಗರದಲ್ಲಿ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರನ್ನು ಗುರಿಯಾಗಿಸಿಕೊಂಡು ನಿಷೇಧಿತ ಮಾದಕವಸ್ತು MDMA ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಮಂಗಳೂರು ನಗರ ಅಪರಾಧ ವಿಭಾಗದ (CCB) ಪೊಲೀಸರು ಮೂವರನ್ನು ಬಂಧಿಸಿ, ಸುಮಾರು ₹24 ಲಕ್ಷ ಮೌಲ್ಯದ 240 ಗ್ರಾಂ MDMA ವಶಪಡಿಸಿಕೊಂಡಿದ್ದಾರೆ.
ಬೆಂಗಳೂರು ನಗರದಿಂದ MDMA ಖರೀದಿಸಿ ಮಂಗಳೂರು ನಗರದಲ್ಲಿ ಮಾರಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಸಿಸಿಬಿ ಪೊಲೀಸರು ಸೆ. 26ರ ಸಂಜೆ ಮುಡಿಪು–ಕಾಯರ್‌ಗೋಳಿ ಕ್ರಾಸ್ ಬಳಿ ಕಾರ್ಯಾಚರಣೆ ನಡೆಸಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತರಿಂದ 240 ಗ್ರಾಂ MDMA ಜತೆಗೆ ನಾಲ್ಕು ಮೊಬೈಲ್ ಫೋನ್‌ಗಳು ಹಾಗೂ ಮಾದಕವಸ್ತು ಸಾಗಾಟಕ್ಕೆ ಬಳಸಿದ್ದ ಟೆಂಪೋ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ. ಒಟ್ಟು ವಶಪಡಿಸಿಕೊಂಡ ಸೊತ್ತಿನ ಮೌಲ್ಯ ಸುಮಾರು ₹29.80 ಲಕ್ಷ ಎಂದು ಪೊಲೀಸರು ತಿಳಿಸಿದ್ದಾರೆ.

ಬಂಧಿತರನ್ನು ನವಾಜ್ ಅಲಿಯಾಸ್ ನವ್ವಾ ಅಲಿಯಾಸ್ ಮುಡಿಪು ನವಾಜ್ (ಗೌಸಿಯಾ ಕಂಪೌಂಡ್, ಕೈರಂಗಳ), ಮೊಹಮ್ಮದ್ ಆರೀಫ್ ಎನ್. (ನಟ್ಟಿಹಿತ್ತಲು ಮನೆ, ಕೈರಂಗಳ) ಹಾಗೂ ಲಾಯ್ಡ್ ಡಿಸೋಜಾ (ಮತ್ತೆಬಾರೆ, ಕೈರಂಗಳ) ಎಂದು ಗುರುತಿಸಲಾಗಿದೆ.
ಪ್ರಮುಖ ಆರೋಪಿ ನವಾಜ್ ವಿರುದ್ಧ ಮಂಗಳೂರು ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ ಹಲ್ಲೆ, ಬೆದರಿಕೆ, ಕೊಲೆಯತ್ನ, ಅಪಹರಣ, ಅತ್ಯಾಚಾರ, ವಂಚನೆ, ದನಗಳ್ಳತನ ಹಾಗೂ ಮಾದಕವಸ್ತು ಮಾರಾಟ ಸೇರಿದಂತೆ ವಿವಿಧ ಅಪರಾಧಗಳಿಗೆ ಸಂಬಂಧಿಸಿದಂತೆ ಒಟ್ಟು 16 ಪ್ರಕರಣಗಳು ದಾಖಲಾಗಿವೆ. ಈ ಪೈಕಿ ಕೊಣಾಜೆ ಪೊಲೀಸ್ ಠಾಣೆಯಲ್ಲಿ 12, ಉಳ್ಳಾಲದಲ್ಲಿ 2, ಮುಲ್ಕಿಯಲ್ಲಿ 1 ಹಾಗೂ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ 1 ಪ್ರಕರಣ ದಾಖಲಾಗಿದೆ
ಮಾದಕವಸ್ತು ಮಾರಾಟಕ್ಕೆ ಸಂಬಂಧಿಸಿದಂತೆ ನವಾಜ್ ವಿರುದ್ಧ ಈ ಹಿಂದೆ ಉಳ್ಳಾಲ ಹಾಗೂ ಕೊಣಾಜೆ ಪೊಲೀಸ್ ಠಾಣೆಗಳಲ್ಲಿ ತಲಾ ಎರಡು ಪ್ರಕರಣಗಳು ಸೇರಿದಂತೆ ಒಟ್ಟು ನಾಲ್ಕು ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸಂಬಂಧ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ. MDMA ಮಾರಾಟ ಮತ್ತು ಸಾಗಾಟದ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿರುವ ಶಂಕೆಯ ಹಿನ್ನೆಲೆಯಲ್ಲಿ ಪೊಲೀಸರು ಇತರ ಆರೋಪಿಗಳ ಪತ್ತೆಗಾಗಿ ಕಾರ್ಯಾಚರಣೆ ಮುಂದುವರಿಸಿದ್ದಾರೆ.

ಕಾರ್ಯಾಚರಣೆಯಲ್ಲಿ ಮಂಗಳೂರು ನಗರ ಸಿಸಿಬಿ ಘಟಕದ ಅಧಿಕಾರಿಗಳು ಹಾಗೂ ಸಿಬ್ಬಂದಿ ಭಾಗವಹಿಸಿದ್ದರು

Related Articles

Leave a Comment

This site uses Akismet to reduce spam. Learn how your comment data is processed.