Home ಬ್ರೇಕಿಂಗ್ ನ್ಯೂಸ್ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಇರಿಸಿರುವುದಾಗಿ ಬೆದರಿಕೆ

ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಇರಿಸಿರುವುದಾಗಿ ಬೆದರಿಕೆ

by Kundapur Xpress

ಉಡುಪಿ : ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಇರಿಸಿರುವುದಾಗಿ ಬೆದರಿಕೆ ಹಾಕಿದ ಇ-ಮೇಲ್ ಬಂದ ಹಿನ್ನೆಲೆಯಲ್ಲಿ ಸೋಮವಾರ ನ್ಯಾಯಾಲಯ ಸಂಕೀರ್ಣದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು. ಬಳಿಕ ಪೊಲೀಸರು, ಶ್ವಾನದಳ ಹಾಗೂ ಬಾಂಬ್ ನಿಷ್ಕ್ರಿಯ ದಳ ನಡೆಸಿದ ಸವಿಸ್ತಾರ ತಪಾಸಣೆಯಲ್ಲಿ ಯಾವುದೇ ಸ್ಫೋಟಕ ವಸ್ತು ಪತ್ತೆಯಾಗದ ಹಿನ್ನೆಲೆಯಲ್ಲಿ ಇದೊಂದು ಹುಸಿ ಬಾಂಬ್ ಬೆದರಿಕೆ ಎಂಬುದು ದೃಢಪಟ್ಟಿದೆ.

ಉಡುಪಿ ಜಿಲ್ಲಾ ನ್ಯಾಯಾಲಯದ ಮುಖ್ಯ ನಿರ್ವಾಹಣಾಧಿಕಾರಿಯವರು ಸೋಮವಾರ ಬೆಳಿಗ್ಗೆ ಕಚೇರಿಗೆ ಆಗಮಿಸಿ ಇ-ಮೇಲ್ ಪರಿಶೀಲಿಸಿದ ವೇಳೆ, ಜೂನ್ 21ರಂದು ಸಂಜೆ 6.33ಕ್ಕೆ ಬಂದಿದ್ದ ಸಂದೇಶದಲ್ಲಿ ನ್ಯಾಯಾಲಯದಲ್ಲಿ ಬಾಂಬ್ ಇರಿಸಿರುವುದಾಗಿ ಇಂಗ್ಲಿಷ್ ಭಾಷೆಯಲ್ಲಿ ಉಲ್ಲೇಖಿಸಿರುವುದು ಕಂಡುಬಂದಿದೆ. ಈ ಬಗ್ಗೆ ತಕ್ಷಣವೇ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಲಾಯಿತು.

ಮಾಹಿತಿ ದೊರೆಯುತ್ತಿದ್ದಂತೆ ಉಡುಪಿ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಬೆಳ್ಳಿಯಪ್ಪ, ಉಡುಪಿ ನಗರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಮಹೇಶ್ ಪ್ರಸಾದ್ ಹಾಗೂ ಪೊಲೀಸ್ ಉಪನಿರೀಕ್ಷಕ ಭರತೇಶ್ ಕಂಕಣವಾಡಿ ನೇತೃತ್ವದ ತಂಡ ನ್ಯಾಯಾಲಯ ಸಂಕೀರ್ಣಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿತು.

ಬಳಿಕ ಶ್ವಾನದಳ ಮತ್ತು ಬಾಂಬ್ ನಿಷ್ಕ್ರಿಯ ದಳವನ್ನು ಸ್ಥಳಕ್ಕೆ ಕರೆಸಿ ನ್ಯಾಯಾಲಯದ ಎಲ್ಲಾ ಕೊಠಡಿಗಳು, ಸಭಾಂಗಣಗಳು, ಶೌಚಾಲಯಗಳು ಸೇರಿದಂತೆ ನ್ಯಾಯಾಲಯದ ಒಳ ಹಾಗೂ ಹೊರ ಆವರಣದಲ್ಲಿ ಸವಿಸ್ತಾರ ತಪಾಸಣೆ ನಡೆಸಲಾಯಿತು. ತಪಾಸಣೆಯ ವೇಳೆ ಯಾವುದೇ ಅನುಮಾನಾಸ್ಪದ ವಸ್ತು ಅಥವಾ ಸ್ಫೋಟಕ ಪತ್ತೆಯಾಗಲಿಲ್ಲ.

ಇದರಿಂದ ಇದು ಸಂಶಯಾಸ್ಪದ ಹುಸಿ ಬಾಂಬ್ ಬೆದರಿಕೆ ಎಂದು ಪೊಲೀಸರು ನಿರ್ಧರಿಸಿದ್ದು, ನಂತರ ನ್ಯಾಯಾಲಯದ ಕಲಾಪಗಳನ್ನು ಎಂದಿನಂತೆ ಮುಂದುವರಿಸಲು ಅವಕಾಶ ಕಲ್ಪಿಸಲಾಯಿತು.

ಈ ಸಂಬಂಧ ಹುಸಿ ಬಾಂಬ್ ಬೆದರಿಕೆ ಇ-ಮೇಲ್ ಕಳುಹಿಸಿದ ಅಪರಿಚಿತ ವ್ಯಕ್ತಿಯ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 76/2026ರಡಿ ಭಾರತೀಯ ನ್ಯಾಯ ಸಂಹಿತೆ (BNS) ಕಲಂ 351(4) ಹಾಗೂ 353(1)(ಬಿ) ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯ ಪತ್ತೆಗೆ ತನಿಖೆ ಮುಂದುವರಿದಿದೆ.

Related Articles