ಮಂಗಳೂರು: ಭಾರತೀಯ ಜನತಾ ಪಕ್ಷದ ಡಬಲ್ ಎಂಜಿನ್ ಸರಕಾರಗಳು ಇರುವಲ್ಲೆಲ್ಲ ದೂರದೃಷ್ಟಿಯ ಅಭಿವೃದ್ಧಿ ಯೋಜನೆಗಳು ನಿರಂತರವಾಗಿ ನಡೆಯುತ್ತಿದ್ದು, ಜನರ ಜೀವನಮಟ್ಟವನ್ನು ಎತ್ತರಿಸುವ ಹಲವು ನಿದರ್ಶನಗಳು ಕಣ್ಣಿಗೆ ರಾಚುವಂತಿವೆ. ಅಮೃತಕಾಲದಲ್ಲಿ ಭಾರತವನ್ನು ಜಗತ್ತಿನ ನಂಬರ್ ಒನ್ ರಾಷ್ಟ್ರವನ್ನಾಗಿಸುವ ಪ್ರಧಾನಿ ನರೇಂದ್ರ ಮೋದಿಯವರ ಕನಸಿನ ಯೋಜನೆಗಳನ್ನು ಕರ್ನಾಟಕದಲ್ಲಿ ಬಿಜೆಪಿ ಸರಕಾರವು ಅತ್ಯುತ್ತಮ ರೀತಿಯಲ್ಲಿ ಜಾರಿಗೊಳಿಸಿದೆ ಎಂದು ಕೇಂದ್ರ ಆರೋಗ್ಯಖಾತೆ ರಾಜ್ಯ ಸಚಿವೆ ಭಾರತಿ ಪವಾರ್ ಹೇಳಿದರು.
ಬಿಜೆಪಿಯ ವಿಭಾಗ ಮಾಧ್ಯಮ ಕೇಂದ್ರದಲ್ಲಿ ಇಂದು ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಪುತ್ತೂರಿನಲ್ಲಿ ಅತ್ಯಂತ ತಳಮಟ್ಟದಿಂದ ಬಂದ ಮಹಿಳೆಯೊಬ್ಬರಿಗೆ ಬಿಜೆಪಿ ಅವಕಾಶ ನೀಡಿರುವುದನ್ನು ಎಲ್ಲ ವರ್ಗದ ಜನತೆ ಸ್ವಾಗತಿಸಿ, ಬೆಎಂಬಲ ವ್ಯಕ್ತಪಡಿಸುತ್ತಿದ್ದಾರೆ. ಹೀಗಾಗಿ ಪಕ್ಷದ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ಅವರ ಗೆಲುವು ನಿಶ್ಚಿತವಾಗಿದೆ ಎಂದು ಭಾರತಿ ಪವಾರ್ ವಿಶ್ವಾಸ ವ್ಯಕ್ತಪಡಿಸಿದರು.
ಪುತ್ತೂರಿನಲ್ಲಿ ಬಿಜೆಪಿ ಅಭ್ಯರ್ಥಿಯ ಪರ ಎರಡು ದಿನಗಳ ಕಾಲ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದ ಅವರು, ಬಿಜೆಪಿ ಪರವಾಗಿ ಜನರ ಒಲವಿರುವುದು ತಮ್ಮ ಅನುಭವಕ್ಕೆ ಬಂದಿದೆ ಎಂದರು.
ಆರೋಗ್ಯ ಕ್ಷೇತ್ರದಲ್ಲಿ ಕರ್ನಾಟಕದ ಸಾಧನೆಗಳು ಅಪೂರ್ವವಾಗಿವೆ. ಆರೋಗ್ಯಕ್ಷೇತ್ರದ ಸೇವೆಗಳನ್ನು ಬಲಪಡಿಸಲು ಬಿಜೆಪಿ ಸರಕಾರ ಕೈಗೊಂಡ ಕ್ರಮಗಳನ್ನು ಅಂಕಿ-ಅಂಶಗಳ ಸಹಿತ ವಿವರಿಸಿದರು.
ಸುದ್ದಿಗೋಷ್ಠಿಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ್ ಮೂಡುಬಿದ್ರೆ, ಪಕ್ಷದ ಜಿಲ್ಲಾ ವಕ್ತಾರ ಜಗದೀಶ್ ಶೇಣವ, ಜಿಲ್ಲಾ ಒಬಿಸಿ ಮೋರ್ಚಾ ಅಧ್ಯಕ್ಷ ಆರ್.ಸಿ ನಾರಾಯಣ್ ಮತ್ತು ಬಿಜೆಪಿ ಮುಖಂಡರಾದ ಸಂಜಯ್ ಪ್ರಭು ಉಪಸ್ಥಿತರಿದ್ದರು.