ಉಡುಪಿ: ಬಿಜೆಪಿ ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾದ ಜಿಲ್ಲಾ ಕಾರ್ಯಕಾರಿಣಿ ಸಭೆಯು ಜಿಲ್ಲಾ ಒಬಿಸಿ ಮೋರ್ಚಾ ಅಧ್ಯಕ್ಷ ಸುರೇಂದ್ರ ಪಣಿಯೂರ್ ರವರ ಅಧ್ಯಕ್ಷತೆಯಲ್ಲಿ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆಯಿತು. ಕಾರ್ಯಕಾರಿಣಿ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಜಿಲ್ಲಾ ಒಬಿಸಿ ಮೋರ್ಚಾ ಪ್ರಸಕ್ತ ಅವಧಿಯಲ್ಲಿ ಅತ್ಯುತ್ತಮ ಕಾರ್ಯ ಚಟುವಟಿಕೆಗಳನ್ನು ನಿರ್ವಹಿಸಿದೆ. ವಿಧಾನಸಭಾ ಚುನಾವಣೆಯ ಗೆಲುವಿನಲ್ಲಿ ಜಿಲ್ಲೆಯ ಹಿಂದುಳಿದ ವರ್ಗಗಳ ಮತವು ನಿರ್ಣಾಯಕ ಪಾತ್ರ ವಹಿಸಿದೆ. ಚುನಾವಣಾ ಗೆಲುವಿಗೆ ಶ್ರಮಿಸಿದ ಒಬಿಸಿ ಮೋರ್ಚಾ ಹಾಗೂ ಭರ್ಜರಿ ಗೆಲುವಿಗೆ ಕೈಜೋಡಿಸಿದ ಎಲ್ಲರನ್ನೂ ಅಭಿನಂದಿಸುತ್ತೇನೆ. ಮುಂಬರಲಿರುವ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಹಾಗೂ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಅತ್ಯಧಿಕ ಮತಗಳ ಅಂತರದಿಂದ ಗೆಲ್ಲಿಸಲು ಎಲ್ಲರೂ ಸಂಘಟಿತ ಶ್ರಮ ವಹಿಸಬೇಕು ಎಂದು ಕರೆ ನೀಡಿದರು.
ಉಡುಪಿ ಶಾಸಕ ಯಶ್ಪಾಲ್ ಎ. ಸುವರ್ಣರವರು ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ಆಡಳಿತದಲ್ಲಿ ಹಿಂದುಳಿದ ವರ್ಗಗಳಿಗೆ ಹೆಚ್ಚಿನ ಮಾನ್ಯತೆ ದೊರೆತಿದೆ. ‘ಸಬ್ ಕೇ ಸಾಥ್ ಸಬ್ ಕಾ ವಿಕಾಸ್, ಸಬ್ ಕಾ ವಿಶ್ವಾಸ್, ಸಬ್ ಕಾ ಪ್ರಯಾಸ್’ ತತ್ವದಡಿ ಪ್ರಧಾನಿ ಮೋದಿ ನೇತೃತ್ವದಲ್ಲಿ ದೇಶದೆಲ್ಲೆಡೆ ಅಭಿವೃದ್ಧಿಯ ಹೊಸ ಶಕೆ ಪ್ರಾರಂಭಗೊಂಡಿದೆ. ಭಾರತ ಆರ್ಥಿಕತೆಯ ಪ್ರಗತಿಯ ವೇಗದಲ್ಲಿ ವಿಶ್ವದಲ್ಲೇ ಮೂಂಚೂಣಿ ಸ್ಥಾನವನ್ನು ಪಡೆದಿದೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಭರ್ಜರಿ ಬಹುಮತದಿಂದ ಗೆಲ್ಲಿಸುವ ಮೂಲಕ ನರೇಂದ್ರ ಮೋದಿಯವರನ್ನು ಮಗದೊಮ್ಮೆ ದೇಶದ ಪ್ರಧಾನಿಯನ್ನಾಗಿಸಲು ಎಲ್ಲರೂ ಕಂಕಣಬದ್ಧರಾಗಿ ಶ್ರಮಿಸಬೇಕಾಗಿದೆ ಎಂದರು.
ಬಿಜೆಪಿ ಜಿಲ್ಲಾ ಒಬಿಸಿ ಮೋರ್ಚಾ ಅಧ್ಯಕ್ಷ ಸುರೇಂದ್ರ ಪಣಿಯೂರು ರವರು ಪ್ರಾಸ್ತಾವಿಕವಾಗಿ ಮಾತನಾಡಿ, ಕಾರ್ಯಕರ್ತರು ಪಕ್ಷದ ಅತ್ಯಮೂಲ್ಯ ಆಸ್ತಿ. ಕಾರ್ಯಕರ್ತರ ನಿಸ್ವಾರ್ಥ ಸೇವೆಯ ಫಲವಾಗಿ ಬಿಜೆಪಿ ಜಿಲ್ಲೆಯ ಐದೂ ವಿಧಾನಸಭಾ ಕ್ಷೇತ್ರಗಳಲ್ಲಿ ದೊಡ್ಡ ಅಂತರದ ಗೆಲುವು ಸಾಧಿಸಿರುವುದು ಕಾರ್ಯಕರ್ತರ ಪರಿಶ್ರಮಕ್ಕೆ ಸಂದ ಜಯವಾಗಿದೆ. ಮುಂದಿನ ಎಲ್ಲ ಚುನಾವಣೆಗಳಲ್ಲಿಯೂ ಇದೇ ರೀತಿಯ ಸ್ಫೂರ್ತಿ ಮತ್ತು ಕಾರ್ಯಬದ್ಧತೆಯೊಂದಿಗೆ ಪಕ್ಷದ ಗೆಲುವಿಗೆ ಕಟಿಬದ್ಧರಾಗಬೇಕು ಎಂದು ವಿನಂತಿಸಿದರು.
ಕಾರ್ಯಕಾರಿಣಿ ಸಭೆಯಲ್ಲಿ ಪಕ್ಷದ ಪ್ರಮುಖರು, ಒಬಿಸಿ ಮೋರ್ಚಾ ಜಿಲ್ಲಾ ಪದಾಧಿಕಾರಿಗಳು, ಜಿಲ್ಲಾ ಕಾರ್ಯಕಾರಿಣಿ ಸದಸ್ಯರು, ಒಬಿಸಿ ಮೋರ್ಚಾ ಮಂಡಲಗಳ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳು ಉಪಸ್ಥಿತರಿದ್ದರು.
ಒಬಿಸಿ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಸತೀಶ್ ಕುಲಾಲ್ ಕಡಿಯಾಳಿ ಸ್ವಾಗತಿಸಿ, ಕಾರ್ಯಕ್ರಮ ನಿರ್ವಹಿಸಿ, ಅರುಣ್ ಕುಮಾರ್ ಬಾಣ ವಂದಿಸಿದರು