Home » ಉಡುಪಿ ಜಿಲ್ಲೆಯ ಸಂಪೂರ್ಣ ಕಡೆಗಣನೆ
 

ಉಡುಪಿ ಜಿಲ್ಲೆಯ ಸಂಪೂರ್ಣ ಕಡೆಗಣನೆ

- ವೀಣಾ ಎಸ್. ಶೆಟ್ಟಿ

by Kundapur Xpress
Spread the love

ಉಡುಪಿ : ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್‌ ರವರು ಉಡುಪಿ ಜಿಲ್ಲೆಯನ್ನು ಸಂಪೂರ್ಣ ಕಡೆಗಣಿಸಿ, ಜಿಲ್ಲೆಗೆ ಭೇಟಿ ಮಾಡಿ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸುವಲ್ಲಿ ವಿಫಲರಾಗಿದ್ದಾರೆ ಎಂದು ಬಿಜೆಪಿ ಉಡುಪಿ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ವೀಣಾ ಎಸ್. ಶೆಟ್ಟಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವರು ಕೇವಲ ಜಿಲ್ಲಾ ಮಟ್ಟದ ಸ್ವಾತಂತ್ಯ ದಿನಾಚರಣೆ, ಕನ್ನಡ ರಾಜ್ಯೋತ್ಸವ ಮುoತಾದ ಸಮಾರಂಭಕ್ಕೆ ಮಾತ್ರ ಸೀಮಿತವಾಗಿದ್ದು, ಜಿಲ್ಲೆಯ ಅಭಿವೃದ್ಧಿಗೆ ಯಾವುದೇ ಆಸಕ್ತಿ ತೋರುತ್ತಿಲ್ಲ. ಜಿಲ್ಲೆಯಲ್ಲಿ ನಗರಸಭೆ, ತಾಲೂಕು ಪಂಚಾಯತ್, ಜಿಲ್ಲಾ ಪಂಚಾಯತ್ ಜನಪ್ರತಿನಿಧಿಗಳಿಲ್ಲದೆ ಅಧಿಕಾರಿಗಳೇ ಅಧಿಕಾರ ನಡೆಸುತ್ತಿದ್ದು ಜನಸಾಮಾನ್ಯರ ದೈನಂದಿನ ಸಮಸ್ಯೆಗಳಿಗೆ ಅಧಿಕಾರಿಗಳು ಸ್ಪಂದನೆ ನೀಡುತ್ತಿಲ್ಲ.

ರಾಜ್ಯ ಸರ್ಕಾರ ಘೋಷಿಸಿರುವ ತಮ್ಮದೇ ಇಲಾಖೆಯ ಗೃಹ ಲಕ್ಷ್ಮೀ ಯೋಜನೆಯಿಂದ ಜಿಲ್ಲೆಯ ಬಹುಪಾಲು ಮಹಿಳೆಯರು ವಂಚಿತರಾಗಿದ್ದಾರೆ. ನಗರಸಭೆ ಸಹಿತ ಸರ್ಕಾರಿ ಕಚೇರಿಗಳಲ್ಲಿ ಅಧಿಕಾರಿಗಳು ಕಾಂಗ್ರೆಸ್ ಪಕ್ಷದ ಏಜೆಂಟರಂತೆ ವರ್ತಿಸುತ್ತಿದ್ದು, ವ್ಯಾಪಕ ಭ್ರಷ್ಟಾಚಾರ, ಕಳಪೆ ಕಾಮಗಾರಿಗಳಿಂದ ಜನರು ಬೇಸತ್ತಿದ್ದಾರೆ.

ಕಳೆದ ಹಲವು ವರ್ಷಗಳಿಂದ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಪೂರ್ವಭಾವಿಯಾಗಿ ಮೂಲ ಸೌಕರ್ಯಗಳ ಅಭಿವೃದ್ಧಿಗೆ ಎಲ್ಲಾ ಸರಕಾರಗಳು ತಮ್ಮ ಅವಧಿಯಲ್ಲಿ ವಿಶೇಷ ಅನುದಾನವನ್ನು ಮಂಜೂರು ಮಾಡಿದೆ. ಈ ಬಾರಿ ಮಾತ್ರ ರಾಜ್ಯ ಸರ್ಕಾರದಿಂದ ಯಾವುದೇ ಅನುದಾನ ಮಂಜೂರು ಮಾಡಿಸುವಲ್ಲಿಯೂ ಜಿಲ್ಲಾ ಉಸ್ತುವಾರಿ ಸಚಿವರು ವಿಫಲರಾಗಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವರು ಕೂಡಲೇ ಜಿಲ್ಲೆಗೆ ಆಗಮಿಸಿ ಜಿಲ್ಲಾಡಳಿತಕ್ಕೆ ಚುರುಕು ಮುಟ್ಟಿಸುವ ಮೂಲಕ ಜಿಲ್ಲೆಯ ಅಭಿವೃದ್ಧಿಗೆ ವಿಶೇಷ ಆಸಕ್ತಿ ವಹಿಸಬೇಕು. ತಪ್ಪಿದಲ್ಲಿ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ವತಿಯಿಂದ ಸಚಿವರ ವಿರುದ್ಧ ಬೃಹತ್ ಪ್ರತಿಭಟನೆಯನ್ನು ನಡೆಸುವುದಾಗಿ ವೀಣಾ ಎಸ್. ಶೆಟ್ಟಿ ಪತ್ರಿಕಾ ಪ್ರಕಟಣೆಯ ಮೂಲಕ ಎಚ್ಚರಿಕೆ ನೀಡಿದ್ದಾರೆ.

   

Related Articles

error: Content is protected !!