ಉಡುಪಿ : ಪ್ರವಾಹ, ಸಿಡಿಲು ಮತ್ತಿತರ ಪ್ರಾಕೃತಿಕ ವಿಕೋಪಗಳಲ್ಲಿ ಜೀವ ಅಥವಾ ಆಸ್ತಿಪಾಸ್ತಿ ಹಾನಿ ತಪ್ಪಿಸಲು ಅಗತ್ಯವಿರುವ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ ಸೂಚನೆ ನೀಡಿದರು. ಅವರು ಮಂಗಳವಾರ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲೆಯಲ್ಲಿ ಮಳೆಯಿಂದಾಗುವ ಪ್ರವಾಹ ಸೇರಿದಂತೆ ಮತ್ತಿತರ ಅವಘಡಗಳ ಪರಿಸ್ಥಿತಿಗಳನ್ನು ಎದುರಿಸಲು ಎಲ್ಲ ಇಲಾಖಾ ಅಧಿಕಾರಿಗಳು ರಕ್ಷಣಾ ಸಾಮಗ್ರಿಗಳೊಂದಿಗೆ ಸನ್ನದ್ದರಾಗುವುದರ ಜೊತೆಗೆ ನೆರೆ ಸಂಭವಿಸಬಹುದಾದ ಪ್ರದೇಶಗಳನ್ನು ಗುರುತಿಸಿ, ಅಗತ್ಯವಿರುವ ಎಲ್ಲ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ವಿಕೋಪಗಳನ್ನು ನಿರಾಯಾಸವಾಗಿ ನಿಭಾಯಿಸಲು ಮುಂದಾಗಬೇಕು ಎಂದು ಸೂಚನೆ ನೀಡಿದರು.
ಮಳೆ, ಗುಡುಗು, ಮಿಂಚು ಬಗ್ಗೆ ಮುಂಜಾಗ್ರತಾ ಕ್ರಮಗಳ ಬಗ್ಗೆ ಸಾರ್ವಜನಿಕರಲ್ಲಿ ಹೆಚ್ಚಿನ ಪ್ರಚಾರ ಕೈಗೊಳ್ಳುವಂತೆ ತಿಳಿಸಿದ ಅವರು, ನಗರ ಸ್ಥಳೀಯ ಸಂಸ್ಥೆ, ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಧ್ವನಿವರ್ಧಕಗಳ ಮೂಲಕ ಸುರಕ್ಷತಾ ಕ್ರಮ ಕೈಗೊಳ್ಳುವ ಬಗ್ಗೆ ವ್ಯಾಪಕ ಪ್ರಚಾರ ನೀಡಬೇಕು ಎಂದರು.