ಉಡುಪಿ : ಲೋಕಸಭಾ ಚುನಾವಣೆ ಮತ ಎಣಿಕೆ ಕಾರ್ಯ ಸುಲಲಿತವಾಗಿ ಚುನಾವಣಾ ಆಯೋಗದ ನಿರ್ದೇಶನದಂತೆ ನಡೆಸಲು ಅಗತ್ಯ ಇರುವ ಎಲ್ಲ ರೀತಿಯ ಪೂರ್ವ ಸಿದ್ಧತೆಯನ್ನು ಮಾಡಿಕೊಳ್ಳಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾ ಕುಮಾರಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅವರು ಮಂಗಳವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಲೋಕಸಭಾ ಸಾರ್ವತ್ರಿಕ ಚುನಾವಣೆ – 2024ಕ್ಕೆ ಸಂಬಂಧಿಸಿದಂತೆ ಮತ ಎಣಿಕೆ ಕಾರ್ಯದ ಪೂರ್ವ ತಯಾರಿಯ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ನಗರದ ಬ್ರಹ್ಮಗಿರಿಯ ಸೈಂಟ್ ಸಿಸಿಲೀಸ್ ವಿದ್ಯಾ ಸಂಸ್ಥೆಯಲ್ಲಿ ಜೂನ್ 4 ರಂದು ಮತ ಎಣಿಕೆ ಕಾರ್ಯವು ನಡೆಯಲಿದ್ದು, ಚುನಾವಣಾ ಆಯೋಗವು ನೀಡಿರುವ ಮಾರ್ಗದರ್ಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದರೊಂದಿಗೆ ಯಾವುದೇ ರೀತಿಯ ಗೊಂದಲಗಳಿಗೆ ಆಸ್ಪದ ನೀಡದೆ ಮತ ಎಣಿಕೆ ಕಾರ್ಯವನ್ನು ನಡೆಸಬೇಕೆಂದು ತಿಳಿಸಿದರು.