ಬೆಂಗಳೂರು : ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆಗೆ ಸಂಬಂಧಿಸಿದಂತೆ ಇಂದು ಬುಧವಾರ ಸಂಜೆ ದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ನೇತೃತ್ವದಲ್ಲಿ ರಾಜ್ಯ ಬಿಜೆಪಿ ನಾಯಕರ ಸಭೆ ನಡೆಯಲಿದೆ.
ಈ ಸಭೆಯಲ್ಲಿ ಇತ್ಯರ್ಥಗೊಂಡ ಬಳಿಕ ಶುಕ್ರವಾರ ನಡೆಯಲಿರುವ ಪಕ್ಷದ ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ಪ್ರಸ್ತಾಪಗೊಂಡು ಎರಡನೇ ಪಟ್ಟಿಯಲ್ಲಿ ರಾಜ್ಯದ ಕೆಲವು ಲೋಕಸಭಾ ಕ್ಷೇತ್ರಗಳಿಗೂ ಅಭ್ಯರ್ಥಿಗಳ ಹೆಸರುಗಳು ಘೋಷಣೆಯಾಗಲಿವೆ.
ಬುಧವಾರದ ಸಭೆ ಆಧರಿಸಿ ಅಗತ್ಯ ಕಂಡು ಬಂದಲ್ಲಿ ಸ್ಥಾನ ಹಂಚಿಕೆ ಸಂಬಂಧ ರಾಜ್ಯದಲ್ಲಿ ಮಿತ್ರ ಪಕ್ಷವಾಗಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರನ್ನೂ ದೆಹಲಿಗೆ ಕರೆಸಿಕೊಳ್ಳುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.
ಸಭೆ ಹಿನ್ನೆಲೆಯಲ್ಲಿ ಪಕ್ಷದ ಸಂಸದೀಯ ಮಂಡಳಿ ಸದಸ್ಯರೂ ಆಗಿರುವ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಮಂಗಳವಾರ ರಾತ್ರಿ ದೆಹಲಿ ತಲುಪಿದರು. ಇನ್ನುಳಿದಂತೆ ರಾಜ್ಯಾಧ್ಯಕ್ಷ ವಿಜಯೇಂದ್ರ ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ, ಜಗದೀಶ್ ಶೆಟ್ಟರ್, ಪ್ರತಿಪಕ್ಷದ ನಾಯಕ ಆರ್.ಅಶೋಕ್ ಮತ್ತಿತರ ಹಿರಿಯ ನಾಯಕರು ಇಂದು ಬೆಳಗ್ಗೆ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ತಿಳಿದು ಬಂದಿದೆ. ರಾಜ್ಯದಲ್ಲಿ 28 ಲೋಕಸಭಾ ಕ್ಷೇತ್ರಗಳ ಪೈಕಿ ಮೂರರಿಂದ ನಾಲ್ಕು ಕ್ಷೇತ್ರಗಳನ್ನು ಬಿಜೆಪಿಯು ಮಿತ್ರ ಪಕ್ಷ ಜೆಡಿಎಸ್‌ಗೆ ಬಿಟ್ಟುಕೊಡುವ ಸಾಧ್ಯತೆಯಿದೆ. ಇನ್ನುಳಿದಂತೆ ಎರಡು ಅಥವಾ ಮೂರು ಕ್ಷೇತ್ರಗಳನ್ನು ಹೊರತುಪಡಿಸಿ ಇನ್ನುಳಿದ ಬಹುತೇಕ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಆಯ್ಕೆ ಗೊಂದಲದಿಂದ ಕೂಡಿದೆ. ಗೆಲ್ಲುವ ಮಾನದಂಡದಲ್ಲಿ ಟಿಕೆಟ್ ನೀಡಬೇಕು ಎಂಬ ಅಭಿಪ್ರಾಯವನ್ನು ಬಿಎಸ್‌ವೈ, ವಿಜಯೇಂದ್ರ ಹೊಂದಿದ್ದಾರೆ ಎನ್ನಲಾಗಿದೆ