ಉಡುಪಿ : ಜಿಲ್ಲೆಯ ಅಭಿವೃದ್ಧಿ ಕಾಮಗಾರಿಗಳಿಗೆ ಹಾಗೂ ಜನಸಾಮಾನ್ಯರ ಕಲ್ಯಾಣಕ್ಕಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಯೋಜನೆಗಳು ಹಾಗೂ ಕಾರ್ಯಕ್ರಮಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿ, ಜನಸಾಮಾನ್ಯರಿಗೆ ಅನುಕೂಲ ಮಾಡಿಕೊಡಬೇಕು ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅವರು ಮಂಗಳವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ. ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ನಡೆದ ಜಿಲ್ಲಾ ಅಭಿ ವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ (ದಿಶಾ) ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು
ಗ್ರಾಮೀಣ ಭಾಗದ ಜನರಿಗೆ ನಳ್ಳಿ ನೀರಿನ ಸಂಪರ್ಕ ಒದಗಿಸುವ ಜಲ ಜೀವನ್ ಮಿಷನ್ ಕಾಮಗಾರಿಯನ್ನು ವೈಜ್ಞಾನಿಕವಾಗಿ ಕೈಗೊಳ್ಳಬೇಕು. ಕೆಲವೊಂದು ಭಾಗಗಳಲ್ಲಿ ಕಾಮಗಾರಿಗಳನ್ನು ಕೈಗೊಳ್ಳಲು ಅರಣ್ಯ ಭೂಮಿಯಲ್ಲಿ ಕೈಗೊಳ್ಳುವುದು ಅನಿವಾರ್ಯವಾಗಿದೆ. ಈ ಸಂಬಂಧ ಅರಣ್ಯ ಇಲಾಖೆಯ ಒಪ್ಪಿಗೆಗಳನ್ನು ಶೀಘ್ರದಲ್ಲಿಯೇ ಪಡೆದು ಕಾಮಗಾರಿಗಳನ್ನು ಆದ್ಯತೆಯ ಮೇಲೆ ಕೈಗೊಳ್ಳಬೇಕು. ಅರಣ್ಯ ಇಲಾಖೆಯವರು ಸಹ ಈ ಕಾರ್ಯಗಳಿಗೆ ಸ್ಪಂದಿಸಬೇಕೆಂದು ಸೂಚನೆ ನೀಡಿದರು
ಸಭೆಯಲ್ಲಿ ಶಾಸಕರುಗಳಾದ ಯಶ್‌ಪಾಲ್ ಎ. ಸುವರ್ಣ, ಗುರ್ಮೆ ಸುರೇಶ್ ಶೆಟ್ಟಿ, ಕಿರಣ್ ಕುಮಾರ್ ಕೊಡ್ಲಿ ಹಾಗೂ ಗುರುರಾಜ್ ಶೆಟ್ಟಿ ಗಂಟಿಹೊಳೆ, ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

