Home » ಗೆಲುವಿಗೆ ಬದ್ಧತೆಯಿಂದ ಶ್ರಮಿಸಲು ಕೋಟ ಕರೆ
 

ಗೆಲುವಿಗೆ ಬದ್ಧತೆಯಿಂದ ಶ್ರಮಿಸಲು ಕೋಟ ಕರೆ

by Kundapur Xpress
Spread the love

ಉಡುಪಿ : ಜೂನ್ 3ರಂದು ನಡೆಯಲಿರುವ ವಿಧಾನ ಪರಿಷತ್ ಚುನಾವಣೆಯಲ್ಲಿ ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ! ಧನಂಜಯ ಸರ್ಜಿ ಮತ್ತು ನೈರುತ್ಯ ಶಿಕ್ಷಕರ ಕ್ಷೇತ್ರದ ಎನ್.ಡಿ.ಎ. ಅಭ್ಯರ್ಥಿ ಎಸ್.ಎಲ್. ಭೋಜೇಗೌಡ ಅವರ ಗೆಲುವಿಗೆ ಪಕ್ಷದ ಪ್ರಮುಖರು, ವಿವಿಧ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಬದ್ಧತೆಯಿಂದ ತೊಡಗಿಸಿಕೊಳ್ಳಬೇಕು ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಹಾಗೂ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಕರೆ ನೀಡಿದರು.

ಅವರು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಅವರ ಅಧ್ಯಕ್ಷತೆಯಲ್ಲಿ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ದುಡಿದ ಕಾರ್ಯಕರ್ತರಿಗೆ ಧನ್ಯವಾದ ಸಮರ್ಪಣೆ ಮತ್ತು ವಿಧಾನಪರಿಷತ್ ಚುನಾವಣಾ ಪೂರ್ವಸಿದ್ಧತಾ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.

ಇತ್ತೀಚೆಗೆ ನಡೆದ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಸಂಘಟಿತರಾಗಿ ತೊಡಗಿಸಿಕೊಂಡ ಪಕ್ಷದ ಕಾರ್ಯಕರ್ತರ ಪರಿಶ್ರಮ ಅಭಿನಂದನೀಯ. ಚುನಾವಣೆಯಲ್ಲಿ ದೊಡ್ಡ ಅಂತರದ ಗೆಲುವಿನ ನಿರೀಕ್ಷೆ ಇದೆ. ಕ್ಷೇತ್ರದ ಅಭಿವೃದ್ಧಿಗಾಗಿ ನಿಷ್ಠೆಯಿಂದ ಕೆಲಸ ಮಾಡುತ್ತೇನೆ. ಎಲ್ಲರ ಪ್ರೋತ್ಸಾಹ, ಬೆಂಬಲ ಸದಾ ಇರಲಿ ಎಂದರು.

ವಿಧಾನ ಪರಿಷತ್ ಚುನಾವಣೆಯ ನೈರುತ್ಯ ಪದವೀಧರ ಕ್ಷೇತ್ರಕ್ಕೆ ಶಿವಮೊಗ್ಗ ಭಾಗದ ಅಭ್ಯರ್ಥಿಗಳೇ ಬಿಜೆಪಿ ಅಭ್ಯರ್ಥಿಗಳಾಗಿರುವುದು ಇತಿಹಾಸ. ಡಿ.ಹೆಚ್. ಶಂಕರಮೂರ್ತಿಯವರು ಸುದೀರ್ಘ 30 ವರ್ಷಗಳ ಅವಧಿಗೆ ಇದೇ ಕ್ಷೇತ್ರದಿಂದ ವಿಧಾನ ಪರಿಷತ್ ಸದಸ್ಯರಾಗಿದ್ದರು. ಈ ಬಾರಿ ಡಾ! ಧನಂಜಯ ಸರ್ಜಿ ಅವರು ಬಿಜೆಪಿ ಅಭ್ಯರ್ಥಿಯಾಗಿದ್ದಾರೆ. ಬಿಜೆಪಿ-ಜೆಡಿಎಸ್ ಮೈತ್ರಿಯ ಕಾರಣಕ್ಕೆ ನೈರುತ್ಯ ಶಿಕ್ಷಕರ ಕ್ಷೇತ್ರವನ್ನು ಎನ್.ಡಿ.ಎ ಅಭ್ಯರ್ಥಿಯಾಗಿ ಎಸ್.ಎಲ್ ಭೋಜೇಗೌಡ ಅವರು ಸ್ಪರ್ಧಿಸಲು ಬಿಟ್ಟುಕೊಡಲಾಗಿದೆ. ಪಕ್ಷದ ಪರಂಪರೆಯಂತೆ ಅಭ್ಯರ್ಥಿ ಘೋಷಣೆಯಾದ ಬಳಿಕ ಯಾವುದೇ ಗೊಂದಲ ಉಳಿದಿಲ್ಲ. ಜಿಲ್ಲೆಯ ಎಲ್ಲಾ ಶಾಸಕರು, ಪಕ್ಷದ ಪ್ರಮುಖರು, ವಿವಿಧ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಒಟ್ಟಾಗಿ ಒಂದಾಗಿ ವಿಧಾನಪರಿಷತ್ ಚುನಾವಣೆಯನ್ನು ಯಶಸ್ವಿಯಾಗಿ ನಿಭಾಯಿಸಿ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಬದ್ಧತೆಯಿಂದ ಶ್ರಮಿಸಬೇಕು ಎಂದು ಕೋಟ ವಿನಂತಿಸಿದರು.

   

Related Articles

error: Content is protected !!