ಉಡುಪಿ : ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಖಂಡಿಸಿ ರಾಜ್ಯ ಸರಕಾರದ ವಿರುದ್ಧ ಶಿವಮೊಗ್ಗದಲ್ಲಿ ನಡೆದ ಬಿಜೆಪಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಪಕ್ಷದ ಹಿರಿಯ ನಾಯಕ, ಮಾಜಿ ವಿಧಾನ ಪರಿಷತ್ ಸದಸ್ಯ ಎಮ್.ಬಿ. ಭಾನುಪ್ರಕಾಶ್ ರವರು ಹೃದಯಾಘಾತದಿಂದ ಸಾವನ್ನಪ್ಪಿರುವ ಬಗ್ಗೆ ಉಡುಪಿ ಜಿಲ್ಲಾ ಬಿಜೆಪಿ ದಿಗ್ಬ್ರಮೆ ವ್ಯಕ್ತಪಡಿಸಿದೆ. ಹಿರಿಯ ರಾಜಕೀಯ ಮುತ್ಸದ್ಧಿ ಎಮ್.ಬಿ. ಭಾನುಪ್ರಕಾಶ್ ನಿಧನಕ್ಕೆ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ರಾಜ್ಯ ಸರಕಾರದ ವಿರುದ್ಧ ಬಿಜೆಪಿ ಜಿಲ್ಲಾ ಕಚೇರಿಯ ಬಳಿ ನಡೆದ ಬೃಹತ್ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ.ಸುನೀಲ್ ಕುಮಾರ್, ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ, ಶಾಸಕರಾದ ಯಶ್ಪಾಲ್ ಸುವರ್ಣ, ಗುರ್ಮೆ ಸುರೇಶ್ ಶೆಟ್ಟಿ, ಕಿರಣ್ ಕುಮಾರ್ ಕೊಡ್ಗಿ, ಗುರುರಾಜ್ ಗಂಟಿಹೊಳೆ, ಬಿಜೆಪಿ ನಿಕಟಪೂರ್ವ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಮಾಜಿ ಜಿಲ್ಲಾಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ, ಮಾಜಿ ಶಾಸಕ ಲಾಲಾಜಿ ಆರ್. ಮೆಂಡನ್, ಎಸ್.ಸಿ. ಮೋರ್ಚಾ ರಾಜ್ಯ ಉಪಾಧ್ಯಕ್ಷ ದಿನಕರ ಬಾಬು, ಮಹಿಳಾ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ ಸುವರ್ಣ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ದಿನಕರ ಶೆಟ್ಟಿ ಹೆರ್ಗ, ರೇಷ್ಮಾ ಉದಯ ಶೆಟ್ಟಿ, ಪ್ರಮುಖರಾದ ಕುತ್ಯಾರು ನವೀನ್ ಶೆಟ್ಟಿ, ರಾಜೇಶ್ ಕಾವೇರಿ, ಗೀತಾಂಜಲಿ ಸುವರ್ಣ ಸಹಿತ ಪಕ್ಷದ ಮುಖಂಡರು ಮತ್ತು ವಿವಿಧ ಸ್ತರದ ಪದಾಧಿಕಾರಿಗಳು ಸಂತಾಪ ಸೂಚಿಸಿದ್ದಾರೆ.
ಪಕ್ಷದ ಹಿರಿಯ ನಾಯಕರಾಗಿ, ವಿಧಾನ ಪರಿಷತ್ ಸದಸ್ಯರಾಗಿ, ಲೋಕಸಭಾ ಚುನಾವಣೆಯ ಕ್ಲಸ್ಟರ್ ಸಂಚಾಲಕ ಸಹಿತ ಪಕ್ಷದ ಅನನ್ಯ ಜವಾಬ್ದಾರಿಗಳನ್ನು ನಿಷ್ಠೆಯಿಂದ ನಿಭಾಯಿಸಿಕೊಂಡು ಬಂದಿರುವ ಹಿರಿಯ ಅನುಭವಿ ರಾಜಕಾರಣಿ ಎಮ್.ಬಿ. ಭಾನುಪ್ರಕಾಶ್ ರವರ ನಿಧನ ಪಕ್ಷಕ್ಕೆ ತುಂಬಲಾರದ ನಷ್ಟವೆನಿಸಿದೆ. ಅವರ ಪಕ್ಷ ನಿಷ್ಠೆ ಮತ್ತು ಜೀವನಾದರ್ಶ ಪಕ್ಷದ ಕಾರ್ಯಕರ್ತರಿಗೆ ಪ್ರೇರಣಾದಾಯಕ ಎಂದು ಕಿಶೋರ್ ಕುಮಾರ್ ಕುಂದಾಪುರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ