ಉಡುಪಿ : ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಮಂಗಳೂರಿಗೆ ಆಗಮಿಸಿ ರೋಡ್ ಶೋ ನಡೆಸಿದ ಬಳಿಕ ಕಾರ್ಯಕರ್ತರಲ್ಲಿ ಹಾಗೂ ಮತದಾರರಲ್ಲಿ ಹೊಸ ಸಂಚಲನ ಮೂಡಿ ಮತಗಳ ಪ್ರಮಾಣ ಹೆಚ್ಚುವ ಭರವಸೆ ಇದೆ. ಕಾರ್ಯಕರ್ತರ ಹುಮ್ಮಸ್ಸಿನ ಮನೆ ಮನೆ ಪ್ರಚಾರದ ಜೊತೆಗೆ ರಾಜ್ಯ ಬಿಜೆಪಿ ನಾಯಕರು ಹಾಗೂ ಹೊರ ರಾಜ್ಯದಿಂದ ಆಗಮಿಸಿದ ಬಿಜೆಪಿ ನಾಯಕರು ನಮ್ಮ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿಯವರ ಪರವಾಗಿ ಉತ್ತಮ ಪ್ರಚಾರ ಕಾರ್ಯ ನಡೆಸಿದ್ದಾರೆ. ಈ ನಿಟ್ಟಿನಲ್ಲಿ ಜಿಲ್ಲೆಯಾದ್ಯoತ ಬಿಜೆಪಿ ಗೆಲುವಿಗೆ ಪೂರಕ ವಾತಾವರಣ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿಯವರು ದೊಡ್ಡ ಅಂತರದ ಗೆಲುವು ಸಾಧಿಸುವುದು ನಿಶ್ಚಿತ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ತಿಳಿಸಿದ್ದಾರೆ.
ಜಿಲ್ಲೆಯ ನಾಯಕರು, ಪಕ್ಷದ ಪ್ರಮುಖರು ಹಾಗೂ ಎಲ್ಲಾ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರ ಸಂಘಟಿತ ಪರಿಶ್ರಮದ ಫಲವಾಗಿ ಏ.26ರಂದು ನಡೆಯುವ ಲೋಕಸಭಾ ಚುನಾವಣೆಯಲ್ಲಿ ಮತದಾರರು ಗರಿಷ್ಠ ಪ್ರಮಾಣದಲ್ಲಿ ಬಿಜೆಪಿ ಪರ ಮತ ಚಲಾಯಿಸುತ್ತಾರೆ ಮತ್ತು ಜೂನ್ 4ರಂದು ನಮ್ಮ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿಯವರು ಅತ್ಯಂತ ಹೆಚ್ಚಿನ ಬಹುಮತದಿಂದ ಗೆಲ್ಲುವ ಮುಖೇನ ದೇಶದಲ್ಲಿ ಮತ್ತೊಮ್ಮೆ ನರೇಂದ್ರ ಮೋದಿಯವರು ಪ್ರಧಾನಿಯಾಗಿ ಆಡಳಿತದ ಚುಕ್ಕಾಣಿಯನ್ನು ಹಿಡಿಯುತ್ತಾರೆ ಎನ್ನುವ ಸಂಪೂರ್ಣ ವಿಶ್ವಾಸ ಹಾಗೂ ಭರವಸೆ ಇದೆ ಎಂದು ಅವರು ತಿಳಿಸಿದ್ದಾರೆ.
ಚುನಾವಣಾ ಪ್ರಚಾರಕ್ಕಾಗಿ ಜಿಲ್ಲೆಯಲ್ಲಿ ನಡೆದ ಮಹಿಳಾ ಮೋರ್ಚಾ ಸಮಾವೇಶ, ಯುವ ಮೋರ್ಚಾ ಸಮಾವೇಶ, ಎಸ್ಸಿ ಎಸ್ಟಿ ಮೋರ್ಚಾ ಸಮಾವೇಶ, ಹಿಂದುಳಿದ ವರ್ಗಗಳ ಮೋರ್ಚಾ ಸಮಾವೇಶ, ರೋಡ್ ಶೋ ಹಾಗೂ ಸಾರ್ವಜನಿಕ ಸಭೆಗಳಲ್ಲಿ ನಿರೀಕ್ಷೆಗೂ ಮೀರಿ ಜನಸ್ಪಂದನೆ ವ್ಯಕ್ತವಾಗಿದೆ. ಈ ಎಲ್ಲಾ ಸಭೆಗಳಲ್ಲಿ ಭಾಗವಹಿಸಿರುವ ರಾಷ್ಟ್ರ ಮತ್ತು ರಾಜ್ಯ ಮಟ್ಟದ ನಾಯಕರು ಉತ್ತಮ ಜನಾಭಿಪ್ರಾಯ ಮುಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ಉಡುಪಿ ಜಿಲ್ಲೆಯ ಹಾಲಿ ಹಾಗೂ ಮಾಜಿ ಶಾಸಕರುಗಳು, ಲೋಕಸಭಾ ಕ್ಷೇತ್ರದ ಚುನಾವಣಾ ಪ್ರಚಾರ ಸಮಿತಿಯ ಅಧ್ಯಕ್ಷರು, ಚುನಾವಣಾ ಸಂಚಾಲಕರು ಹಾಗೂ ಚುನಾವಣಾ ನಿರ್ವಹಣಾ ಸಮಿತಿಯ ಸದಸ್ಯರು ಹಾಗೂ ವಿವಿಧ ಜವಾಬ್ದಾರಿಗಳನ್ನು ಹೊಂದಿರುವ ಪ್ರಮುಖರು ಚುನಾವಣೆಯನ್ನು ಸವಾಲಾಗಿ ಸ್ವೀಕರಿಸಿ ಅತ್ಯಂತ ಉತ್ಸಾಹ ಹಾಗೂ ಹುಮ್ಮಸ್ಸಿನಿಂದ ತಮ್ಮ ಜವಾಬ್ದಾರಿಗಳನ್ನು ನಿರ್ವಹಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ನಮ್ಮ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿಯವರು ನಿರೀಕ್ಷಿತ ಮಟ್ಟಕ್ಕಿಂತಲೂ ಹೆಚ್ಚಿನ ಮತಗಳ ಅಂತರದಿಂದ ಗೆಲ್ಲುವುದು ಶತಸಿದ್ಧ ಎಂದು ಕಿಶೋರ್ ಕುಮಾರ್ ಕುಂದಾಪುರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.