ಉಡುಪಿ : ಸಮಾಜದ ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಪ್ರೌಡಿಮೆಯನ್ನು ಹೊಂದಿರುವ ಜೊತೆಗೆ ಪಕ್ಷದ ತತ್ವಾದರ್ಶಗಳನ್ನು ಮೈಗೂಡಿಸಿಕೊಂಡಿರುವ ಪ್ರಬುದ್ಧರನ್ನು ಬಿಜೆಪಿ ಪ್ರಕೋಷ್ಠಗಳ ಜಿಲ್ಲಾ ಸಂಯೋಜಕರು ಮತ್ತು ವಿವಿಧ ಪ್ರಕೋಷ್ಠಗಳ ಜಿಲ್ಲಾ ಸಂಚಾಲಕರನ್ನಾಗಿ ನೇಮಿಸಲಾಗಿದೆ. ಪ್ರಕೋಷ್ಠಗಳ ಕ್ರಿಯಾಶೀಲತೆ ಪಕ್ಷದ ಬೆಳವಣಿಗೆಗೆ ಪೂರಕ ಶಕ್ತಿಯಾಗಿ ಪರಿಣಮಿಸಲಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಹೇಳಿದರು.
ಅವರು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಪ್ರಕೋಷ್ಠಗಳ ಜಿಲ್ಲಾ ಸಂಯೋಜಕರು ಮತ್ತು ವಿವಿಧ ಪ್ರಕೋಷ್ಠಗಳ ಜಿಲ್ಲಾ ಸಂಚಾಲಕರು ಮತ್ತು ಸಹ ಸಂಚಾಲಕರುಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಪ್ರಕೋಷ್ಠಗಳ ಜಿಲ್ಲಾ ಸಂಯೋಜಕರು, ಜಿಲ್ಲಾ ಸಂಚಾಲಕರು ಮತ್ತು ಸಹ ಸಂಚಾಲಕರುಗಳು ಜಿಲ್ಲೆ ಮತ್ತು ಮಂಡಗಳಲ್ಲಿ ಪ್ರತೀ ಪ್ರಕೋಷ್ಠಗಳ ಸಮಿತಿಗಳನ್ನು ರಚಿಸಿ, ಅಂತಹ ಸಮಿತಿಗಳು ಪಕ್ಷದ ಎಲ್ಲಾ ಕಾರ್ಯ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುವ ಮೂಲಕ ಪಕ್ಷ ಸಂಘಟನೆಗೆ ವಿಶೇಷ ಕೊಡುಗೆ ನೀಡಬೇಕು ಎಂದು ಅವರು ಕರೆ ನೀಡಿದರು
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ದಿನಕರ ಶೆಟ್ಟಿ ಹೆರ್ಗ, ರೇಷ್ಮಾ ಉದಯ ಶೆಟ್ಟಿ, ಪ್ರಕೋಷ್ಠಗಳ ಜಿಲ್ಲಾ ಸಂಯೋಜಕರುಗಳಾದ ದಿಲೇಶ್ ಶೆಟ್ಟಿ, ಶಂಕರ ಅಂಕದಕಟ್ಟೆ, ಕಾರ್ಮಿಕರ ಪ್ರಕೋಷ್ಠ ರಾಜ್ಯ ಸಮಿತಿ ಸದಸ್ಯ ಶೈಲೇಂದ್ರ ಶೆಟ್ಟಿ, ಪ್ರಬುದ್ಧರ ಪ್ರಕೋಷ್ಠ ರಾಜ್ಯ ಸಮಿತಿ ಸದಸ್ಯ ರಾಧಾಕೃಷ್ಣ ಶೆಟ್ಟಿ, ಬಿಜೆಪಿ ಜಿಲ್ಲಾ ಕೋಶಾಧಿಕಾರಿ ಮನೋಹರ್ ಎಸ್. ಕಲ್ಮಾಡಿ, ನಿಕಟಪೂರ್ವ ಜಿಲ್ಲಾ ಉಪಾಧ್ಯಕ್ಷ ರವಿ ಅಮೀನ್, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಶಿವಕುಮಾರ್ ಅಂಬಲಪಾಡಿ, ಜಿಲ್ಲಾ ಮಾಧ್ಯಮ ಪ್ರಮುಖ್ ಶ್ರೀನಿಧಿ ಹೆಗ್ದೆ, ಗಿರೀಶ್ ಎಮ್. ಅಂಚನ್ ಹಾಗೂ ವಿವಿಧ ಪ್ರಕೋಷ್ಠಗಳ ಜಿಲ್ಲಾ ಸಂಚಾಲಕರು ಮತ್ತು ಜಿಲ್ಲಾ ಸಹ ಸಂಚಾಲಕರು ಉಪಸ್ಥಿತರಿದ್ದರು.