ನವದೆಹಲಿ: ಇತ್ತೀಚಿನ ದಿನಗಳಲ್ಲಿ ಸಕಾರಾತ್ಮಕ ಮತ್ತು ನಕಾರಾತ್ಮಕ ಕಾರಣಗಳಿಂದಾಗಿ ಸುದ್ದಿಯಲ್ಲಿರುವ ಕೃತಕ ಬುದ್ಧಿಮತ್ತೆ (ಎಐ) ಬಗ್ಗೆ ಮತ್ತೊಮ್ಮೆ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ, ಭಾರತದಲ್ಲಿ ಹುಟ್ಟಿದ ಮಕ್ಕಳು ಕೂಡ ಎಐ (ಆಯಿ) ಎನ್ನುತ್ತವೆ ಎಂದು ಲಘುಧಾಟಿಯಲ್ಲಿ ಹೇಳಿದ್ದಾರೆ. ಅಲ್ಲದೆ ದೇಶದ ಲಕ್ಷಾಂತರ ಹೆಣ್ಣು ಮಕ್ಕಳನ್ನು ಬಾಧಿಸುತ್ತಿರುವ ಗರ್ಭಕಂಠದ ಕ್ಯಾನ್ಸರ್‌ಗೆ ಚಿಕಿತ್ಸೆ ನೀಡುವುದು ತಮ್ಮ ಮುಂದಿನ ಆದ್ಯತೆ ಎಂದು ಹೇಳಿದ್ದಾರೆ.
ಜೊತೆಗೆ ಕೃಷಿ, ಶಿಕ್ಷಣ ಮತ್ತು ಆರೋಗ್ಯ ವಲಯದಲ್ಲಿ ತಂತ್ರಜ್ಞಾನದ ಪಾತ್ರ ಪ್ರಮುಖವಾಗಿದ್ದು, ಆ ಕ್ಷೇತ್ರಗಳಲ್ಲಿ ತಮ್ಮ ಸರ್ಕಾರ ಅತ್ಯಾಧುನಿಕ ತಂತ್ರಜ್ಞಾನ ಸೌಲಭ್ಯಗಳನ್ನು ಒದಗಿಸುವಲ್ಲಿ ನಿರತವಾಗಿದೆ ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.
2019ರಲ್ಲಿ ಲೋಕಸಭೆ ಚುನಾವಣೆಗೂ ಮುನ್ನ ಬಾಲಿವುಡ್ ನಟ ಅಕ್ಷಯ್ ಕುಮಾರ್ ಜತೆ ಮುಕ್ತವಾಗಿ ಹರಟೆ ಹೊಡೆದಿದ್ದ ಮೋದಿ ಅವರು ಇದೀಗ ಭಾರತಕ್ಕೆ ಆಗಮಿಸಿದ್ದ ಮೈಕ್ರೋಸಾಫ್ಟ್ ಸಂಸ್ಥಾಪಕ ಬಿಲ್‌ಗೇಟ್ ಅವರೊಂದಿಗೆ ಸಂವಾದ ನಡೆಸಿದ್ದಾರೆ. ಕೃತಕ ಬುದ್ಧಿಮತ್ತೆ, ಆರೋಗ್ಯ, ಶಿಕ್ಷಣ, ಮಹಿಳಾ ಸಬಲೀಕರಣ, ಕೃಷಿ ಸೇರಿದಂತೆ ವಿವಿಧ ವಿಷಗಳ ಬಗ್ಗೆ ಸುದೀರ್ಘವಾಗಿ ಚರ್ಚಿಸಿದ್ದಾರೆ. ಈ ವೇಳೆ ಮೋದಿ ಈ ವಿಷಯಗಳಿಗೆ ಸಂಬಂಧಿಸಿದಂತೆ ಮುಕ್ತವಾಗಿ ಮಾತನಾಡಿದ್ದಾರೆ.